ಕೆಪಿಎಸ್ ಶಾಲೆಗಳ ನಿರ್ಮಾಣಕ್ಕಾಗಿ 2,500 ಕೋಟಿ ರೂ.ವೆಚ್ಚ: ಸಚಿವ ಮಧುಬಂಗಾರಪ್ಪ
ಶಿಕ್ಷಕರ ದಿನಾಚರಣೆ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯ ವರೆಗೆ ಒಂದೇ ಸೂರಿನಡಿ ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಉದ್ದೇಶವಾಗಿದ್ದು, ಒಂದು ಸಾವಿರ ಕೆಪಿಎಸ್‍ಗಳ ನಿರ್ಮಾಣಕ್ಕಾಗಿ 2,500ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರಕಾರಿ ಶಾಲೆಗಳಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣ, ಸರಕಾರ ಶಿಕ್ಷಣ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆ, ಇಲಾಖೆಯ ಆಡಳಿತದಲ್ಲಿ ತಂತ್ರಜ್ಞಾನಗಳ ಅಳವಡಿಕೆ ಇದೆಲ್ಲವನ್ನೂ ಗಮನಿಸಿಯೇ ಏಷ್ಯನ್ ಡೆವಲಪ್‍ಮೆಂಟ್ ಬ್ಯಾಂಕ್ ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ಬೃಹತ್ ಆರ್ಥಿಕ ನೆರವು ನೀಡುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ಈ ಬ್ಯಾಂಕ್ ಇಷ್ಟೊಂ ದು ನೆರವು ನೀಡಿರುವುದು ದೇಶದಲ್ಲಿಯೇ ಇದು ಮೊದಲು. ಇಲಾಖೆಯ ಈ ಯಶಸ್ಸಿಗೆ ಶಿಕ್ಷಕರೇ ಕಾರಣ ಎಂದು ಅವರು ತಿಳಿಸಿದರು.
ಕೆಪಿಎಸ್ ಶಾಲೆಗಳಿಗೆ ಸರಕಾರದಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಕೆಪಿಎಸ್ ಎಂದರೆ ಕೇವಲ ಹೊಸ ಕಟ್ಟಡವಲ್ಲ. ಗುಣಮಟ್ಟದ ಶಿಕ್ಷಣ, ಉತ್ತಮ ಮೂಲಸೌಕರ್ಯ, ಆಧುನಿಕ ಕಲಿಕಾ ವಾತಾವರಣ ಮತ್ತು ಸರಕಾರಿ ಶಾಲೆಗಳ ಮೇಲಿನ ಜನರ ವಿಶ್ವಾಸವನ್ನು ಹೆಚ್ಚಿಸುವ ಸಮಗ್ರ ಪ್ರಯತ್ನವಾಗಿದೆ ಎಂದು ಅವರು ತಿಳಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳನ್ನು ಮಾಡಲಾಗುತ್ತಿದ್ದು, ಇದನ್ನು ಅರಿತು, ಶಿಕ್ಷಕ ವೃಂದ ನಿರಂತರ ಬದಲಾವಣೆಗೆ ಹೊಂದಿಕೊಳ್ಳುತ್ತಿದ್ದಾರೆ. ಸರಕಾರ ಜಾರಿಗೊಳಿಸುತ್ತಿರುವ ಸುಧಾರಣೆಗಳನ್ನು ಸಮರ್ಥವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಈ ಬಾರಿ ಎಸೆಸೆಲ್ಸಿ ಮತ್ತು ಪಿಯುಸಿಯ ಫಲಿತಾಂಶದಲ್ಲಿ ಚಾರಿತ್ರಿಕ ದಾಖಲೆ ಬರೆಯಲಾಗಿತ್ತು. ಇದಕ್ಕೆ ಶಿಕ್ಷಕರೇ ಕಾರಣ ಎಂದು ಮಧು ಬಂಗಾರಪ್ಪ ಹೇಳಿದರು.
2026-27ನೇ ಸಾಲಿನಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಆಧಾರಿತ ಶಿಕ್ಷಣ ಆರಂಭಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಇದನ್ನು 9ರಿಂದ 12ನೇ ತರಗತಿವರೆಗೆ ವಿಸ್ತರಿಸಲಾಗುವುದು. ಅದೇ ರೀತಿ, 2026-27ನೇ ಸಾಲಿನಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಶಿಕ್ಷಣವನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಉದ್ಘಾಟಿಸಿದರು. ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ರಾಮೋಜಿಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
‘ವಿಶೇಷವಾಗಿ ಇದೇ ಮೊದಲ ಬಾರಿಗೆ 1ರಿಂದ 8ನೇ ತರಗತಿವರೆಗೆ ಬೋಧಿಸಲು ಕಂಪ್ಯೂಟರ್ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಮತ್ತಷ್ಟು ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಪ್ರಸ್ತಾವನೆಗೆ ಅನುಮೋದನೆ ದೊರೆತರೆ ಶಿಕ್ಷಣ ಇಲಾಖೆಯಲ್ಲೇ ಸುಮಾರು 18 ರಿಂದ 19 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಲಿದೆ. ಹಿಂದಿನ ಸರಕಾರ ಅರ್ಧಕ್ಕೆ ನಿಲ್ಲಿಸಿದ್ದ 13ಸಾವಿರ ಶಿಕ್ಷಕರ ನೇಮಕಾತಿಯನ್ನೂ ಪೂರ್ಣಗೊಳಿಸಲಾಗಿದೆ’
-ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ






