ಅಕ್ರಮ ಹಣ ವರ್ಗಾವಣೆ ಆರೋಪ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ 2 ದಿನ ಈ.ಡಿ. ವಶಕ್ಕೆ

ಸತೀಶ್ ಸೈಲ್
ಬೆಂಗಳೂರು, ಸೆ.10: ಕಬ್ಬಿಣ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪದಡಿ ಬಂಧಿತರಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು 2 ದಿನ ಜಾರಿ ನಿರ್ದೇಶನಾಲಯ (ಈ.ಡಿ.) ವಶಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಬಂಧಿತ ಸತೀಶ್ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ(ಈ.ಡಿ.)ದ ಅಧಿಕಾರಿಗಳು ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್, ಸೈಲ್ ಅವರನ್ನು ಎರಡು ದಿನಗಳ ಕಾಲ ಈ.ಡಿ. ವಶಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ಸೆಪ್ಟೆಂಬರ್ 12ರಂದು ಸಂಜೆ 5 ಗಂಟೆಗೆ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್ಗಳಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಸತೀಶ್ ಸೈಲ್ ಮತ್ತಿತರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿತ್ತು.
ಈ ಪ್ರಕರಣದಲ್ಲಿ ಅಕ್ರಮವಾಗಿ ಹಣದ ವರ್ಗಾವಣೆ ಸಹ ಕಂಡುಬಂದ ಹಿನ್ನೆಲೆಯಲ್ಲಿ, ಇಸಿಐಆರ್ ದಾಖಲಿಸಿಕೊಂಡಿದ್ದ ಈ.ಡಿ. ಅಧಿಕಾರಿಗಳು ಪ್ರತ್ಯೇಕ ತನಿಖೆ ಆರಂಭಿಸಿದ್ದರು. ಆಗಸ್ಟ್ 13 ಮತ್ತು 14ರಂದು ಸತೀಶ್ ಸೈಲ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ ನಡೆಸಿದಾಗ ನಗದು, ಚಿನ್ನಾಭರಣ ಸಹಿತ 13 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿವೆ ಎಂದು ಈ.ಡಿ. ಅಧಿಕಾರಿಗಳು ತಿಳಿಸಿದ್ದರು.







