ನೇರ ನೇಮಕಾತಿ ಪ್ರಕ್ರಿಯೆ: ಒಳಮೀಸಲಾತಿಯೊಂದಿಗೆ ಹೊಸ ನೇಮಕಾತಿ ಅಧಿಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಿಕೊಂಡು ಕಾಲಬದ್ಧವಾಗಿ ಆಯಾ ಇಲಾಖೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಸಚಿವ ಸಂಪುಟದ ನಿರ್ಣಯದಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ(ಡಿಪಿಎಆರ್) ಸರಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು, ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹಿನ್ನೆಲೆ 2024ರ ಅಕ್ಟೋಬರ್ 28ರ ನಂತರ ಹೊರಡಿಸಲಾದ ಎಲ್ಲ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಬೇಕು ಎಂದು ಉಲ್ಲೇಖಿಸಲಾಗಿದೆ.
ಸರಕಾರದ ಯಾವುದೇ ಇಲಾಖೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲ ನೇಮಕಾತಿ ಅಧಿಸೂಚನೆಗಳನ್ನೂ ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ.





