ವಿವಿಗಳಲ್ಲಿ ‘ಜಾತ್ಯತೀತ ವಿರೋಧಿ’ ಸಭೆ-ಸಮಾರಂಭ ನಡೆಸಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ. 21: ‘ವಿಶ್ವವಿದ್ಯಾಲಯಗಳಲ್ಲಿ ಜಾತ್ಯತೀತ ವಿರೋಧಿ ಮನೋಭಾವ, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ಯಾವುದೇ ಕಾರಣಕ್ಕೂ ಆಯೋಜನೆ ಮಾಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಉನ್ನತ ಶಿಕ್ಷಣ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಸಂವಿಧಾನಕ್ಕೆ ವಿರುದ್ಧವಾದ ಚಟುವಟಿಕೆ ಮತ್ತು ಕ್ರಮಗಳು ವಿವಿಗಳಲ್ಲಿ ನಡೆಯಬಾರದು. ಕೆಲವೊಮ್ಮೆ ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಕರ್ತೃಗಳು, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ನಡೆಸಿರುವುದನ್ನು ನೋಡಿದ್ದೇನೆ. ಹಾಗಾಗಿ, ಜಾತ್ಯತೀತ ವಿರೋಧಿ ಮನೋಭಾವವನ್ನು ಪುರಸ್ಕರಿಸಬಾರದು’ ಎಂದರು.
‘ವಿವಿಗಳಿಂದ ಬಂದವರು ಮತ್ತೆ ಮೌಢ್ಯಗಳು, ಜಾತಿಯ ಜೊತೆಯಲ್ಲಿದ್ದರೆ ಅವರು ಪಡೆದಿರುವುದು ಶಿಕ್ಷಣ ಎಂದು ಕರೆಯಲಾಗದು. ವಿವಿಗಳಲ್ಲಿ ಧರ್ಮ ನಿರಪೇಕ್ಷತೆ, ಮೌಢ್ಯ ರಹಿತ, ಕಂದಾಚಾರ ರಹಿತ ಹಾಗೂ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು.ಇಲ್ಲವಾದರೆ ಉನ್ನತ ಶಿಕ್ಷಣ ಸರಿದಾರಿಯಲ್ಲಿ ಸಾಗದೆ ಹೋದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸುವ ವಾತಾವರಣ ನಿರ್ಮಿಸಬೇಕು’ ಎಂದು ಅವರು ಸೂಚಿಸಿದರು.
‘ಸಾಕಷ್ಟು ಮೂಲಸೌಲಭ್ಯಗಳ ಕೊರತೆಗಳನ್ನು ಇಟ್ಟುಕೊಂಡು ಜಿಲ್ಲೆಗೊಂದು ವಿವಿ ಮಾಡುವ ತೀರ್ಮಾನ ಸರಿಯಲ್ಲ. ಮೂಲಸೌಲಭ್ಯ ಒದಗಿಸಲಾಗದಿದ್ದರೆ ಪ್ರಯೋಜನವಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಶೇ.3ರ ಕ್ಕಿಂತ ಹೆಚ್ಚು ಅನುದಾನ ಒದಗಿಸಲಾಗಿತ್ತು. ಮುಂದಿನ ವರ್ಷದಿಂದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಪ್ರಯತ್ನ ಮಾಡಲಾಗುವುದು. ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಯಾವುದೇ ಲೋಪವಾಗಬಾರದು. ಒಂದೇ ಬಾರಿ ಎಲ್ಲ ಪರಿಹಾರ ಒದಗಿಸಲಾಗದು. ಆದರೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು’ ಎಂದು ಅವರು ತಿಳಿಸಿದರು.
ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದ ಅವರು, ಬೇರೆ ಬೇರೆ ಭಾಷೆ, ಸಂಸ್ಕøತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ. ಕುಲಪತಿಗಳು ನಮ್ಮ ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ’ ಎಂದು ಅವರು ನುಡಿದರು







