ಬಿಜೆಪಿ ವಿರುದ್ಧ ಆಕ್ಷೇಪಾರ್ಹ ಜಾಹೀರಾತು; ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ರಾಹುಲ್ ಗಾಂಧಿ | Photo Credit ; PTI
ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಪಕ್ಷ ನೀಡಿದ್ದ ಜಾಹೀರಾತನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಲ್ಲಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಬಿಜೆಪಿ ಹೂಡಿದ್ದ ಮಾನಹಾನಿ ಪ್ರಕರಣ ರದ್ದು ಕೋರಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿತು.
ಅರ್ಜಿ ಮಾನ್ಯ ಮಾಡಿರುವ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದಲ್ಲಿನ ಪ್ರಕ್ರಿಯೆ ಮುಂದುವರಿಕೆಯು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಆದ್ದರಿಂದ, ಪ್ರಕರಣದ 4ನೇ ಆರೋಪಿ ರಾಹುಲ್ ಗಾಂಧಿ ವಿರುದ್ಧದ ಪ್ರಕ್ರಿಯೆ ರದ್ದುಪಡಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿತು.
ಹೈಕೋರ್ಟ್ ಆದೇಶದಲ್ಲೇನಿದೆ?
* ಹಾಲಿ ಪ್ರಕರಣದಲ್ಲಿ ಆರೋಪಣೆಯು ವ್ಯಂಗ್ಯೋಕ್ತಿಯಾಗಿದ್ದು, ಅದನ್ನು ಪಕ್ಷಕ್ಕೆ ವಿಸ್ತರಿಸಲಾಗಿದೆ. ಟ್ವೀಟ್ನಲ್ಲಿ ಬಳಕೆ ಮಾಡಿರುವ ಜಾಹೀರಾತಿನಲ್ಲಿ ಯಾವುದೇ ಪಕ್ಷವನ್ನು ಉಲ್ಲೇಖಿಸಲಾಗಿಲ್ಲ. ಆದರೆ, ಜಾಹೀರಾತಿನಲ್ಲಿ ಉಲ್ಲೇಖಿಸಿರುವ ಪದಾಧಿಕಾರಿಗಳ ವಿರುದ್ಧ ಆರೋಪವಿದೆ. ಜಾಹೀರಾತಿನಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿರುವವರ ಕುರಿತು ಉಲ್ಲೇಖಿಸಲಾಗಿದ್ದು, ಸರ್ಕಾರಿ ಯೋಜನೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಫಲಾನುಭವಿಗಳು ಎಂದು ಉಲ್ಲೇಖಿಸಲಾಗಿದೆ. ಜಾಹೀರಾತಿನಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ನ್ಯಾಯಾಲಯದ ಮುಂದೆ ಬಂದಿಲ್ಲ. ಆದ್ದರಿಂದ, ಜಾಹೀರಾತಿನಲ್ಲಿನ ವಾಸ್ತವಿಕ ರಾಜಕೀಯ ಪಕ್ಷವು ಬಾದಿತ ವ್ಯಕ್ತಿಯಲ್ಲ.
* ಆರೋಪಿಯು ನ್ಯಾಯಾಲಯದ ವ್ಯಾಪ್ತಿಯ ಪ್ರದೇಶದ ಹೊರಗಿರುವುದರಿಂದ ಸಿಆರ್ಪಿಸಿ ಸೆಕ್ಷನ್ 202 ಅಡಿ ತನಿಖೆ ನಡೆಸಬೇಕಿದೆ. ಇದರಲ್ಲೂ ಪ್ರಕ್ರಿಯೆ ಲೋಪವಾಗಿದೆ. ಸಿಆರ್ಪಿಸಿ ಸೆಕ್ಷನ್ 202ರ ಪ್ರಕ್ರಿಯೆ ಪಾಲಿಸದಿರುವುದು ರಾಹುಲ್ ಗಾಂಧಿಗೆ ಪೂರ್ವಾಗ್ರಹ ಉಂಟು ಮಾಡಲಿದೆ. ಅಲ್ಲದೇ, ಸಿಆರ್ಪಿಸಿ ಸೆಕ್ಷನ್ 202 ತನಿಖೆ ನಡೆಸಲು ಕೋರದೇ ದೂರುದಾರರು ಸಾಮಾನ್ಯ ನಡೆಯನ್ನು ಅನುಸರಿಸಿದ್ದಾರೆ. ಸಮನ್ಸ್ ಜಾರಿ ಮಾಡುವುದಕ್ಕೂ ಮುನ್ನ ಈ ಪ್ರಕ್ರಿಯೆ ಪಾಲಿಸಲು ದೂರುದಾರರು ಕೋರಬೇಕಿತ್ತು.
* ಆರೋಪಿಯನ್ನು ಪ್ರಾಸಿಕ್ಯೂಷನ್ ದೂರಿನ ಭಾಗವಾಗಿಸುವುದಕ್ಕೂ ಮುನ್ನ ಸಮನ್ಸ್ ಜಾರಿ ಮಾಡುವುದಕ್ಕೂ ಮುಂಚೆಯೇ ವಿಚಾರಣಾ ನ್ಯಾಯಾಲಯವು ವಿವೇಚನೆ ಬಳಸಬೇಕಿತ್ತು. ಪ್ರಾಸೆಸ್ ಜಾರಿಗೂ ಮುನ್ನ ಮೇಲ್ನೋಟಕ್ಕೆ ಪ್ರಕರಣ ಇದೆಯೇ ಎಂಬುದನ್ನು ವಿಚಾರಣಾ ನ್ಯಾಯಾಲಯ ನಿರ್ಧರಿಸಬೇಕಿತ್ತು. ಹಾಲಿ ಪ್ರಕರಣದಲ್ಲಿ ಜಾಹೀರಾತು ಮಾತ್ರ ಇಟ್ಟುಕೊಂಡು ತೀರ್ಮಾನಿಸಲಾಗಿದೆ. ಆದರೆ, ಅದರಲ್ಲಿ ಆರೋಪಿಯ ವಿರುದ್ಧ ಪ್ರಕರಣ ಮುಂದುವರಿಸುವ ಯಾವುದೇ ಅಂಶಗಳಿಲ್ಲ.
* ಟ್ವೀಟ್ ಅನ್ನು ದಾಖಲೆಯಲ್ಲಿ ಸೇರಿಸದೇ ಆನಂತರದ ವಿಚಾರಣೆಯಲ್ಲಿ ಅದನ್ನು ದೂರಿನ ಭಾಗವಾಗಿಸಲಾಗುವುದು ಎಂದು ಬಿಜೆಪಿ ಪರ ವಕೀಲರು ಹೇಳಿರುವುದು ಕಾನೂನಿನ ದೋಷವನ್ನು ಸರಿಪಡಿಸುವುದಿಲ್ಲ.
ಪ್ರಕರಣವೇನು?
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಭ್ರಷ್ಟಾಚಾರವನ್ನು ಪ್ರಧಾನ ಅಸ್ತ್ರವಾಗಿಸಿದ್ದ ಕಾಂಗ್ರೆಸ್ ಪಕ್ಷ 2023ರ ಮೇ 5ರಂದು ಎಲ್ಲ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ 'ಭ್ರಷ್ಟಾಚಾರ ದರ ಪಟ್ಟಿ' ಎಂಬ ಹೆಸರಿನಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಜಾಹೀರಾತು ನೀಡಿತ್ತು.
ಜತೆಗೆ, ಕೋವಿಡ್ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ 25-30 ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ. 40 ಕಮಿಷನ್ನ (ಬಿಜೆಪಿ) ಸರ್ಕಾರ 1.5 ಲಕ್ಷ ಕೋಟಿ ರೂ.ಗಳನ್ನು ಕಳೆದ 4 ವರ್ಷಗಳಲ್ಲಿ ಲೂಟಿ ಮಾಡಿದೆ ಎಂದು ಆರೋಪಿಸಿತ್ತು.
ಇದರ ವಿರುದ್ಧ ದೂರು ದಾಖಲಿಸಿದ್ದ ಬಿಜೆಪಿ, ಡಬಲ್ ಇಂಜಿನ್ ಸರ್ಕಾರಕ್ಕೆ ಬದಲಾಗಿ ಟ್ರಬಲ್ ಇಂಜಿನ್ ಸರ್ಕಾರ ಎಂದು ಹೇಳುವ ಮೂಲಕ ಪಕ್ಷದ ವರ್ಚಸ್ಸಿಗೆ ಕಾಂಗ್ರೆಸ್ ಹಾನಿ ಮಾಡಿದೆ. ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ. ಕೊನೆಯಲ್ಲಿ ಕಾಂಗ್ರೆಸ್ಗೆ ಮತ ನೀಡಿ ಎಂದು ಆರೋಪಿಗಳು ಕೇಳಿದ್ದಾರೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ನೇರ ಕಾರಣವಾಗಿದ್ದಾರೆ ಎಂದು ಆರೋಪಿಸಿತ್ತು.
ರಾಹುಲ್ ಗಾಧಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಸುಳ್ಳು ಜಾಹೀರಾತು ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ಮಾನಹಾನಿ ಮಾಡುವ ಪ್ರಯತ್ನ ಮಾಡಲಾಗಿದೆ. ಆದ್ದರಿಂದ, ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.
ಈ ಸಂಬಂಧ 2023ರ ಜೂನ್ನಲ್ಲಿ ವಿಚಾರಣಾ ನ್ಯಾಯಾಲಯವು ಐಪಿಸಿ ಸೆಕ್ಷನ್ಗಳಾದ 499 ಮತ್ತು 500ರ ಅಡಿ ಕಾಂಗ್ರೆಸ್, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ವಿರುದ್ಧ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡಿದೆ. ಇದನ್ನು ರದ್ದು ಕೋರಿ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು.






