ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು : ಬಿಜೆಪಿ ಮುಖಂಡರ ಚಿತ್ರಗಳನ್ನು ಆಕ್ಷೇಪಾರ್ಹ ಹೇಳಿಕೆಗಳೊಂದಿಗೆ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (42ನೇ ಎಸಿಎಂಎಂ ಕೋರ್ಟ್) ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪುರಸ್ಕರಿಸಿದೆ. ವಿಸ್ತೃತ ತೀರ್ಪು ಇನ್ನಷ್ಟೇ ಲಭ್ಯವಾಗಬೇಕಿದೆ.
ಪ್ರಕರಣವೇನು?
ಮೂರು ದಶಕಗಳ ಹಿಂದೆ ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಡೆ ಖಂಡಿಸಿ ಬಿಜೆಪಿಯು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಆ ಸಂದರ್ಭದಲ್ಲಿ ಬಿಜೆಪಿ ನಾಯಕರು "ನಾನೂ ಕರಸೇವಕ; ನನ್ನನ್ನೂ ಬಂಧಿಸಿ" ಎಂಬ ಒಕ್ಕಣೆ ಹೊಂದಿದ್ದ ಭಿತ್ತಿಪತ್ರ ಹಿಡಿದು ಅಭಿಯಾನ ನಡೆಸಿದ್ದರು.
ಇದನ್ನು ಟೀಕಿಸುವ ಉದ್ದೇಶದಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಫೋಟೊ ಬಳಸಿ "ನಾನು ಆರ್‌ಟಿಜಿಎಸ್ ಮೂಲಕ ಲಂಚ ಪಡೆದಿದ್ದೇನೆ. 40 ಸಾವಿರ ಕೋಟಿ ಅಕ್ರಮದಲ್ಲಿ ಪಾಲುದಾರ ನನ್ನನ್ನು ಬಂಧಿಸಿ" ಎಂದೂ, ಶಾಸಕ ವಿ. ಸುನೀಲ್ ಕುಮಾರ್ ಫೋಟೊ ಬಳಸಿ "ನಾನು ಪರಶುರಾಮ ಮೂರ್ತಿ ಕಂಚನ್ನು ಕದ್ದಿದ್ದೇನೆ; ಸಿಮೆಂಟ್ ಕದ್ದಿದ್ದೇನೆ ನನ್ನನ್ನೂ ಬಂಧಿಸಿ" ಎಂಬ ಒಕ್ಕಣೆಯ ಚಿತ್ರಗಳನ್ನು ಪೋಸ್ಟ್ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಅಂದಿನ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿಯೂ ಆಗಿದ್ದ ಡಿ.ಕೆ. ಶಿವಕುಮಾರ್ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಬಿ.ಆರ್. ನಾಯ್ಡು ವಿರುದ್ಧ ಬಿಜೆಪಿ ಕಾನೂನು ಘಟಕದ ಸಂಚಾಲಕ ಯೋಗೇಂದ್ರ ಹೊಡಾಘಟ್ಟ 2024ರಲ್ಲಿ ದೂರು ನೀಡಿದ್ದರು.
ದೂರು ಆಧರಿಸಿ ಡಿ.ಕೆ. ಶಿವಕುಮಾರ್ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 153ಎ (ಧರ್ಮ, ಜನಾಂಗ, ಭಾಷೆ ಮುಂತಾದವುಗಳ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಹಾಗೂ ಸೌಹಾರ್ದತೆಗೆ ಧಕ್ಕೆ ತರುವುದು), 505(2) (ವಿವಿಧ ವರ್ಗಗಳ ನಡುವೆ ಹಗೆತನ, ದ್ವೇಷ ಅಥವಾ ದುರಭಿಪ್ರಾಯ ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆ ನೀಡುವುದು), 504 (ಶಾಂತಿಭಂಗ ತರಲು ಉದ್ದೇಶಪೂರ್ವಕ ಅಪಮಾನ) ಹಾಗೂ 464 (ಸುಳ್ಳು ದಾಖಲೆ ಸೃಷ್ಟಿಸುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದರಿಂದ, ಪ್ರಕರಣ ರದ್ದುಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.






