ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ವಿಪಕ್ಷ ನಾಯಕರ ಹೇಳಿಕೆ, ಛಾಯಾಚಿತ್ರ, ವಿಡಿಯೋಗಳನ್ನು ಬಿಡುಗಡೆಗೊಳಿಸುತ್ತಿಲ್ಲ: ಸ್ಪೀಕರ್ ಗೆ ಆರ್.ಅಶೋಕ್ ಪತ್ರ
"ಪ್ರತಿಪಕ್ಷದ ಸದಸ್ಯರ ಛಾಯಾಚಿತ್ರಗಳು, ವಿಡಿಯೋಗಳು ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿಲ್ಲ"

ಬೆಂಗಳೂರು: ಅಧಿವೇಶನದ ಕಾರ್ಯ ಕಲಾಪಗಳಲ್ಲಿ ವಿಪಕ್ಷ ನಾಯಕರು ಸೇರಿದಂತೆ ಬಿಜೆಪಿ-ಜೆಡಿಎಸ್ ಸದಸ್ಯರ ಛಾಯಾಚಿತ್ರಗಳು ಮತ್ತು ವಿಡಿಯೋಗಳನ್ನು ತಾರತಮ್ಯವಿಲ್ಲದೆ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಸಭೆ ಸ್ಪೀಕರ್ ಜಿ.ಎಸ್.ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.
ಸೋಮವಾರ ಈ ಸಂಬಂಧ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ ತಾರತಮ್ಯವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.
ಆ.13ರಿಂದ ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ವಿಪಕ್ಷ ನಾಯಕರು ಹಾಗೂ ಶಾಸಕರ ಹೇಳಿಕೆಗಳು, ಛಾಯಾಚಿತ್ರಗಳು ಮತ್ತು ವಿಡಿಯೋಗಳನ್ನು ಬಿಡುಗಡೆಗೊಳಿಸುತ್ತಿಲ್ಲ. ಇದರಿಂದ ಪ್ರತಿಪಕ್ಷದ ಸದಸ್ಯರ ಛಾಯಾಚಿತ್ರಗಳು ಹಾಗೂ ವಿಡಿಯೋಗಳು ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಮುಖ್ಯಮಂತ್ರಿ, ಸಚಿವರು ಹಾಗೂ ಆಡಳಿತ ಪಕ್ಷದ ಶಾಸಕರ ಎಲ್ಲ ಹೇಳಿಕೆಗಳು, ಛಾಯಾಚಿತ್ರಗಳು ಮತ್ತು ವಿಡಿಯೋಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಸದನದಲ್ಲಿ ಈ ರೀತಿಯ ತಾರತಮ್ಯ ಹಿಂದೆಂದೂ ನಡೆದಿಲ್ಲ ಎಂದು ಆರ್.ಅಶೋಕ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.






