ಸೆ.10ರಿಂದ ಕೌನ್ಸಿಲಿಂಗ್ ಮೂಲಕ ಪಿಡಿಒ ವರ್ಗಾವಣೆ ಪ್ರಕ್ರಿಯೆ ಆರಂಭ : ಪ್ರಿಯಾಂಕ್ ಖರ್ಗೆ

ಬೆಂಗಳೂರು, ಸೆ.1 : ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಿದ್ದು ಸೆ.10ರಿಂದ 20ರ ವರೆಗೆ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಹಾಗೂ ಸೆ.23 ಮತ್ತು 24ರಂದು ಸಾಮಾನ್ಯ ಕೋರಿಕೆ ವರ್ಗಾವಣೆಗಳ ಕೌನ್ಸಿಲಿಂಗ್ ಪ್ರಕ್ರಿಯೆಗಳು ಜರುಗಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸೋಮವಾರ ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು, ಪಂಚಾಯತಿ ಅಭಿವೃದ್ದಿ ಆಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ದಿ ಸಹಾಯಕ (ಗ್ರೇಡ್-1 ಮತ್ತು ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು 2024ನ್ನು ರಚಿಸಿ, ಅಧಿಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಈ ನಿಯಮಗಳಿಗೆ ಸೂಕ್ತ ತಿದ್ದುಪಡಿಗಳನ್ನು ತಂದು, ಒಂದೆ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ಕಡ್ಡಾಯವಾಗಿ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಈಗಾಗಲೆ ಆನ್ ಲೈನ್ ಮೂಲಕ ವಿಶೇಷ ಪ್ರಕರಣಗಳ ಅಡಿಯಲ್ಲಿ 515 ಅರ್ಜಿಗಳು ಹಾಗೂ ಸಾಮಾನ್ಯ ಕೋರಿಕೆಯ ಅಡಿಯಲ್ಲಿ 1215 ಅರ್ಜಿಗಳು ಸೇರಿದಂತೆ ಒಟ್ಟು 1730 ಅರ್ಜಿಗಳು ಸ್ವೀಕೃತಗೊಂಡಿವೆ, ಪ್ರಸಕ್ತ ಖಾಲಿ ಹುದ್ದೆಗಳ, ಕಡ್ಡಾಯ ವರ್ಗಾವಣೆಗಳ ರಾಜ್ಯವಾರು ಅಂತಿಮ ಪಟ್ಟಿ ಹಾಗೂ ವರ್ಗಾವಣೆಯಿಂದ ವಿನಾಯತಿಗಾಗಿ ಕೋರಿಕೆ ಸಲ್ಲಿಸಿದವರ ಪಟ್ಟಿಯನ್ನು https://rdprtransfer.karnataka.gov.in/ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಆ.29ರಂದು ವಿಶೇಷ ಪ್ರಕರಣಗಳ ಅಂತಿಮ ವರ್ಗಾವಣೆ ಆದ್ಯತಾ ಪಟ್ಟಿಯನ್ನು, ಸೆ.1ರಂದು ಸಾಮಾನ್ಯ ಕೋರಿಕೆ ಮತ್ತು ಕಡ್ಡಾಯ ವರ್ಗಾವಣೆಯ ಅಂತಿಮ ಆದ್ಯತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸೆ.3ರಿಂದ 8ರವರೆಗೆ ವಿಶೇಷ ಪ್ರಕರಣಗಳ ಮೊದಲ ಸುತ್ತಿನ ಕೌನ್ಸಿಲಿಂಗ್ ಹಾಗೂ ಸೆ.8ರಂದು ವಿಶೇಷ ಪ್ರಕರಣಗಳ ಎರಡನೆ ಸುತ್ತಿನ ಕೌನ್ಸಿಲಿಂಗ್ ಕೈಗೊಳ್ಳಲಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
2024-25ನೆ ಸಾಲಿನ ಆಯವ್ಯಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದೆಂದು ಘೋಷಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಅದರಂತೆ, ಸರಕಾರ ಜೂ.25ರಂದು ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
‘ಗ್ರಾಮೀಣಾಭಿವೃದ್ಧಿ ಇಲಾಖೆಯು ಇದೇ ಮೊದಲ ಬಾರಿಗೆ ಪಿಡಿಒ ವರ್ಗಾವಣೆ ಪ್ರಕ್ರಿಯೆಯನ್ನು ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ನಡೆಸುತ್ತಿದ್ದು ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗುತ್ತದೆ. ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್ -2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಗಳಿಗೆ ಸಂಬಂಧಿಸಿದಂತೆ 31 ಜಿಲ್ಲೆಗಳಲ್ಲಿ ಅರ್ಹತೆ ಹೊಂದಿದ 1300 ನೌಕರರಿಗೆ ಆನ್ ಲೈನ್ ಮೂಲಕ ಕೌನ್ಸಿಲಿಂಗ್ ನಡೆಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಿಜಿಟಲ್ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ಹೊರಡಿಸಿ ಸ್ಥಳದಲ್ಲೆ ನೌಕರರಿಗೆ ನೀಡಿದ್ದು, ಇಲಾಖೆ ಪ್ರಥಮ ಬಾರಿಗೆ ಪಾರದರ್ಶಕ ರೀತಿಯಲ್ಲಿ ಪ್ರಕ್ರಿಯೆಗಳನ್ನು ನಡೆಸಿದೆ.
-ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ







