ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಅಧಿಸೂಚನೆ ಪ್ರಕಟಿಸಲು ಕೋರಿದ ಪಿಐಎಲ್: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಪ್ರಸಕ್ತ ವರ್ಷಾಂತ್ಯಕ್ಕೆ ಅವಧಿ ಪೂರ್ಣಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯಿತಿ ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ವಾರ್ಡವಾರು ಮೀಸಲಾತಿ ಜತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸರಕಾರ ಮತ್ತು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ವಾದ ಮಂಡಿಸಿದ ರಾಜ್ಯ ಚುನಾವಣಾ ಆಯೋಗದ ಪರ ವಕೀಲೆ ವೈಶಾಲಿ, ನಗರ ಸ್ಥಳೀಯ ಸಂಸ್ಥೆಗಳ ಅವಧಿಯು ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಮುಗಿಯಲಿದೆ ಎಂದರು. ಸರಕಾರದ ಪರ ವಕೀಲೆ ನಿಲೋಫರ್ ಅಕ್ಬರ್ ಅವರು, ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದ ಅರ್ಜಿಯೊಂದು ಡಿಸೆಂಬರ್ 11ಕ್ಕೆ ನಿಗದಿಯಾಗಿದೆ. ಇದು ನಗರ ಸಭೆ ಮತ್ತು ಪುರಸಭೆಗೆ ಸಂಬಂಧಿಸಿದ್ದಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅರ್ಜಿಯಲ್ಲೇನಿದೆ?
ರಾಜ್ಯ ಚುನಾವಣಾ ಆಯೋಗದ ವತಿಯಿಂದ ಜನವರಿ 27 ಮತ್ತು ಜೂನ್ 26ರಂದು ಸರಕಾರಕ್ಕೆ ಪತ್ರ ಬರೆದು ಅಂತಿಮ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಲಾಗಿದೆ. ಆದರೆ, ಸರಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಸಕಾಲಕ್ಕೆ ಚುನಾವಣೆ ನಡೆಸದಿರುವುದು ಸಂವಿಧಾನದ ವಿಧಿ 243-ಯು ಉಲ್ಲಂಘನೆಯಾಗಿದ್ದು, ಈಗಾಗಲೇ ಕಲಬುರಗಿ ಜಿಲ್ಲೆ ವಾಡಿಯ ಪಟ್ಟಣ ಪಂಚಾಯಿತಿ ಮತ್ತು ಬಾಗಲಕೋಟೆಯ ಮಹಾಲಿಂಗಪುರ ಪುರಸಭೆಯ ಅವಧಿ ಮುಕ್ತಾಯವಾಗಿದ್ದು, 185 ನಗರಸಭೆ/ಪುರಸಭೆಗಳ ಅವಧಿಯು ಅಕ್ಟೋಬರ್‌ನಿಂದ ಡಿಸೆಂಬರ್ ಅವಧಿಯಲ್ಲಿ ಮುಗಿಯಲಿದೆ. ಚುನಾವಣೆ ವಿಳಂಬವಾದರೆ ಸರಕಾರ ಆಡಳಿತಾಧಿಕಾರಿ ನೇಮಕ ಮಾಡಲಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಲಿದೆ ಎಂದು ಅರ್ಜಿಯಲ್ಲಿ ವಿವರಿಸಿರುವ ಆಯೋಗ, ಈ ನಿಟ್ಟಿನಲ್ಲಿ ರಾಜ್ಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದೆ.







