ಕನ್ನಡ ಬಿಗ್ ಬಾಸ್ ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ !

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಜಾರಿ ಮಾಡಲಾಗಿರುವ ಬಗ್ಗೆ ವರದಿಯಾಗಿದೆ.
ಬಿಗ್‌ಬಾಸ್ ಆಯೋಜಕರು ಸರಿಯಾದ ರೀತಿಯಲ್ಲಿ ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್ ನೀಡಲಾಗಿದ್ದು, ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
ಬಿಡದಿ ಸಮೀಪ ಇರುವ ಜಾಲಿವುಡ್ ಸ್ಟುಡಿಯೋದಲ್ಲಿ ಈ ಬಾರಿಯ ಬಿಗ್ ಬಾಸ್ ಮನೆಯನ್ನು ನಿರ್ಮಿಸಲಾಗಿದೆ. ಜಾಲಿವುಡ್ ಸ್ಟುಡಿಯೋದಲ್ಲಿ ಉಂಟಾಗುತ್ತಿರುವ ತಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡಿಲ್ಲ, ಮಾತ್ರವಲ್ಲ ಜಾಲಿವುಡ್ ಸ್ಡುಡಿಯೋ ನಡೆಸಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿಯೂ ಪಡೆದಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡರೆ ಶೋ ನಿಲ್ಲುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಒಂದು ಅಮ್ಯೂಸ್ಮೆಂಟ್ ಪಾರ್ಕ್. ಅದರಿಂದ ಹೊರಬರುತ್ತಿರುವ ದೊಡ್ಡ ಪ್ರಮಾಣದ ತಾಜ್ಯ ನೀರನ್ನು ಸರಿಯಾಗಿ ಸಂಸ್ಕರಿಸದೇ ಹೊರಗೆ ಬಿಡಲಾಗುತ್ತಿದೆ. ಅದರಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪೇಪರ್ ತಟ್ಟೆ, ಲೋಟ, ಪ್ಲಾಸ್ಟಿಕ್ ತ್ಯಾಜ್ಯ ಮುಂತಾದವುಗಳನ್ನು ಕೂಡ ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.





