ಮೂರು ದಿನಗಳ ಕಾಲ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಳ ಸಾಧ್ಯತೆ

ಸಾಂದರ್ಭಿಕ ಚಿತ್ರ | Photo: PTI
ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಾಗಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಳಿಯ ಪ್ರಮಾಣ ಕಡಿಮೆ ಇದ್ದು, ತಡರಾತ್ರಿ ಮಂಗಳೂರು, ಸುರತ್ಕಲ್ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಹಾಗೂ ಒಣ ಹವೆ ಮುಂದುವರಿಯಲಿದೆ.
ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉತ್ತರ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರುವುದರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಸಂಜೆ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಆದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರಾತ್ರಿ ಮೋಡದ ವಾತಾವರಣ ಇರಲಿದೆ.







