ಗ್ರಾ.ಪಂ.ಕಚೇರಿಗಳಲ್ಲಿ ಇ-ಸ್ವತ್ತು ಕಾಲ್ ಸೆಂಟರ್ ಸಂಖ್ಯೆ ಪ್ರದರ್ಶಿಸಲು ಪ್ರಿಯಾಂಕ್ ಖರ್ಗೆ ನಿರ್ದೇಶನ

ಪ್ರಿಯಾಂಕ್ ಖರ್ಗೆ
ಬೆಂಗಳೂರು : ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಕಾಲ್ ಸೆಂಟರ್ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದರು.
ಶುಕ್ರವಾರ ನಗರದಲ್ಲಿ ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ಗ್ರಾಮ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರು ಅವರು ಮಾತನಾಡಿದರು.
ಇ-ಸ್ವತ್ತು ಬಗ್ಗೆ ಬರುವ ಯಾವುದೆ ದೂರುಗಳನ್ನು ಆದ್ಯತೆಯ ಮೇಲೆ ಪರಿಹರಿಸಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು. ಗ್ರಾಮೀಣ ಜನರು ಈ ಯೋಜನೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದ್ದು, ಸಾರ್ವಜನಿಕರಿಂದ ಬರುವ ದೂರುಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಬಗೆಹರಿಸಬೇಕು ಎಂದು ಅವರು ಸೂಚಿಸಿದರು.
ಇ-ಸ್ವತ್ತು ತಂತ್ರಾಂಶದಲ್ಲಿನ ಕೆಲವು ಲೋಪಗಳ ಬಗ್ಗೆ ಕೆಲವು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಈ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು. ತಂತ್ರಾಂಶವನ್ನು ಎನ್.ಐ.ಸಿ ಸಿದ್ಧಪಡಿಸಿದ್ದು ಲೋಪಗಳನ್ನು ಸರಿಪಡಿಸಲು ವಿಳಂಬವಾಯಿತು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಯ ಕಾರ್ಯದರ್ಶಿ ಡಿ.ರಂದೀಪ್, ಪಂಚಾಯತ್ ರಾಜ್ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಪಾಲ್ಗೊಂಡಿದ್ದರು.







