ಮಹಿಳೆಯರ ಆರೋಗ್ಯ ರಕ್ಷಣೆಗೆ ‘ಋತು ತಾರೆ’ ಯೋಜನೆ : ವಿಪಕ್ಷ ನಾಯಕ ರಾಹುಲ್ ಗಾಂಧಿ ಮೆಚ್ಚುಗೆ
ದಕ್ಷಿಣ ಕನ್ನಡದಲ್ಲಿ ಮೂರು ತಿಂಗಳು ಪ್ರಾಯೋಗಿಕ ಅನುಷ್ಠಾನ

ಬೆಂಗಳೂರು : ರಾಜ್ಯದ ಮಹಿಳೆಯರ ಸಮಗ್ರ ಆರೋಗ್ಯ ರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ‘ಋತು ತಾರೆ’ ಎಂಬ ವಿನೂತನ ಆರೋಗ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ಆರಂಭಿಸಲಾದ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದ ಇನ್ಸ್ಟಾಗ್ರಾಮ್ ನಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿರುವ, ಯೋಜನೆಯ ಕುರಿತು ಬೆಳಕುಚೆಲ್ಲಿದ್ದಾರೆ.
ಸಾಮಾನ್ಯವಾಗಿ 35 ವರ್ಷ ದಾಟಿದ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಆರೋಗ್ಯ ಸಮಸ್ಯೆಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ಪರಿಗಣಿಸಿ ನಿರ್ಲಕ್ಷಿಸುವ ಪ್ರವೃತ್ತಿಯಿದೆ. ಇಂತಹ ಮಹಿಳೆಯರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಈ ಯೋಜನೆಯಡಿ ಮಹಿಳೆಯರಿಗೆ ಪ್ರತ್ಯೇಕ ಕ್ಲಿನಿಕ್ ಸೌಲಭ್ಯದೊಂದಿಗೆ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಸಲಹೆ, ಪೌಷ್ಟಿಕ ಆಹಾರದ ಮಾರ್ಗದರ್ಶನ, ಋತುಬಂಧದ ಆರೈಕೆ ಹಾಗೂ ಅಗತ್ಯವಿದ್ದಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸಲಾಗುತ್ತದೆ. ಅಲ್ಲದೆ, ಪ್ರತಿಯೊಬ್ಬ ಫಲಾನುಭವಿಗೂ ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸುವ ವ್ಯವಸ್ಥೆ ಮಾಡಲಾಗಿದೆ.
ಮೊದಲ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಹಂತದ ಅನುಭವ ಮತ್ತು ಫಲಿತಾಂಶಗಳನ್ನು ಆಧರಿಸಿ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಯೋಜನೆಯನ್ನು ವಿಸ್ತರಿಸಲು ಸರ್ಕಾರ ಉದ್ದೇಶಿಸಿದೆ.
ಮಹಿಳೆಯರಿಗೆ ಅವರ ವಯಸ್ಸು ಮತ್ತು ಆರೋಗ್ಯದ ಅಗತ್ಯಗಳಿಗೆ ಅನುಗುಣವಾಗಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಸುಲಭವಾಗಿ ತಲುಪಿಸುವುದು ಈ ಯೋಜನೆಯ ಆಶಯ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೆಚ್ಚುಗೆಯ ಬಳಿಕ ‘ಋತು ತಾರೆ’ ಕಾರ್ಯಕ್ರಮ ರಾಷ್ಟ್ರಮಟ್ಟದಲ್ಲಿಯೂ ಗಮನ ಸೆಳೆದಿದೆ.






