ನ.23ರಿಂದ 6 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಹತ್ತಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಳೆ (ನ.23)ಯಿಂದ 6 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಹುತೇಕ ಒಣಹವೆಯ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಮಲೆನಾಡು, ಕರಾವಳಿ, ಬೆಂಗಳೂರು, ಹಳೆ ಮೈಸೂರು ಭಾಗ ಸೇರಿದಂತೆ ವಿವಿಧೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದ್ದು, ಆಗಾಗ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ ವಾಡಿಕೆಯ ಮಟ್ಟದಿಂದ ವಾಡಿಕೆಗಿಂತ ಹೆಚ್ಚಾಗಿರುವ ಸಾಧ್ಯತೆಯಿದೆ. ಕನಿಷ್ಠ ಉಷ್ಣಾಂಶ ಸಾಮಾನ್ಯ ಹಾಗೂ ಸಾಮಾನ್ಯಕಿಂತ ಕಡಿಮೆ ಇರಲಿದೆ.
ನ.23ರ ಸೋಮವಾರ ಕೋಲಾರ, ಬೆಂಗಳೂರು ದಕ್ಷಿಣ ಮತ್ತು ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.
ನ.24ರ ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣ ಹವಾಮಾನವಿರುವ ಸಾಧ್ಯತೆಯಿದೆ. ಬೆಂಗಳೂರು ನಗರ, ಕೋಲಾರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನ.28ರ ಶನಿವಾರ ಚಿಕ್ಕಮಗಳೂರು, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಹಾಸನ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಬೆಂಗಳೂರು ದಕ್ಷಿಣ, ಶಿವಮೊಗ್ಗ, ಚಾಮರಾಜನಗರ, ತುಮಕೂರು ಮತ್ತು ವಿಜಯನಗರ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಜಿಲ್ಲೆಯಲ್ಲಿ ಒಣಹವೆ ಇರಲಿದೆ.






