ದೀಪಾವಳಿ ಹಬ್ಬ: ಪಟಾಕಿ ಸಿಡಿಸಲು 2 ಗಂಟೆ ಅವಧಿ ನಿಗದಿ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣದ ಉದ್ದೇಶದಿಂದ ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಹೊಡೆಯಲು ಸಮಯ ನಿಗದಿಪಡಿಸಲಾಗಿದೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನ.8ರಿಂದ 10ರ ವರೆಗೆ ದೀಪಾವಳಿ ಹಬ್ಬರ ಆಚರಣೆ ನಡೆಯಲಿದ್ದು, ಈ ವೇಳೆ ರಾತ್ರಿ 8ರಿಂದ 10 ಗಂಟೆಯ ವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳ ಅನ್ವಯ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಪಟಾಕಿಗಳ ತಯಾರಿಕೆಯಲ್ಲಿ ಸೋಡಿಯಂ, ಬೇರಿಯಂ, ತಾಮ್ರ ಮತ್ತು ಅಲ್ಯೂಮಿನಿಯಂ ನಂತಹ ಲೋಹಗಳನ್ನು ಬಳಸಲಾಗುತ್ತದೆ. ಇವುಗಳಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ, ಪರಿಸರ ಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಹಸಿರು ಪಟಾಕಿಗಳ ಬಳಕೆಗೆ ಆದ್ಯತೆ ನೀಡಲಾಗಿದೆ. ಹಸಿರು ಪಟಾಕಿಗಳಲ್ಲಿ ಲೋಹದ ಅಂಶವನ್ನು ಸುಮಾರು ಶೇ.30ರಷ್ಟು ಕಡಿಮೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಪಟಾಕಿಗಳ ಮಾರಾಟ, ಬಳಕೆ ಮತ್ತು ಮಾಲಿನ್ಯ ನಿಯಂತ್ರಣದ ಮೇಲ್ವಿಚಾರಣೆಗಾಗಿ ಪ್ರತಿ ಜಿಲ್ಲೆಯಲ್ಲಿ ಕಾರ್ಯಪಡೆ ರಚಿಸಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳು, ಅಗ್ನಿಶಾಮಕ ದಳದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ತಹಶೀಲ್ದಾರರು, ಜಿಲ್ಲಾ ಪರಿಸರ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಕಾರ್ಯಪಡೆಯಲ್ಲಿರಲಿದ್ದಾರೆ. ಪೊಲೀಸ್ ಇಲಾಖೆ ನಿಯಮಗಳ ಉಲ್ಲಂಘನೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಪಟಾಕಿಗಳಿಂದ ಸಂಭವಿಸುವ ಅಪಘಾತಗಳಲ್ಲಿ ಅನೇಕರು ಕಣ್ಣಿನ ದೃಷ್ಟಿಗಳನ್ನೆ ಕಳೆದುಕೊಳ್ಳುತ್ತಾರೆ. ಹೀಗಾಗಿ, ಸಾರ್ವಜನಿಕರು ಪಟಾಕಿ ಸಿಡಿಸುವಾಗ ಅತ್ಯಂತ ಜಾಗರೂಕರಾಗಿರಬೇಕು. ಬಸ್‍ಗಳಲ್ಲಿ ಪಟಾಕಿಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ನಿಯಮಗಳ ಕುರಿತು ಸಾರ್ವಜನಿಕರಿಗೆ ಜಾಹೀರಾತುಗಳ ಮೂಲಕ ಮಾಹಿತಿ ನೀಡುವಂತೆಯೂ ಸೂಚಿಸಲಾಗಿದೆ.
ಸಾರ್ವಜನಿಕರು ಹಸಿರು ಪಟಾಕಿಗಳನ್ನು ಬಳಸಬೇಕು. ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವುದು ಅಥವಾ ದಾಸ್ತಾನು ಮಾಡುವುದು ಕಂಡುಬಂದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇಂತಹ ಪಟಾಕಿಗಳನ್ನು ಸಂಗ್ರಹಿಸಿಟ್ಟಿರುವ ಗೋದಾಮುಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.






