ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ ಸಿಸಿಬಿಗೆ ರವಾನೆ
ಜಂಟಿ ಆಯುಕ್ತರ ಮೇಲ್ವಿಚಾರಣೆ, ಡಿಸಿಪಿ ನೇತೃತ್ವದಲ್ಲಿ ತನಿಖೆ

ನಟಿ ರಮ್ಯಾ (Photo credit: instagram/divyaspandana)
ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ರವಾನಿಸುತ್ತಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದ್ದು, ಅಪರಾಧ ವಿಭಾಗದ ಜಂಟಿ ಆಯುಕ್ತರ ಮೇಲ್ವಿಚಾರಣೆಯಲ್ಲಿ ಓರ್ವ ಎಸಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಮಂಗಳವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಇನ್ಸ್ಟಾಗ್ರಾಂ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಟಿ ರಮ್ಯಾ ದೂರು ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಸೈಬರ್ ಠಾಣೆಗೆ ನೀಡಲಾಗಿದೆ ಎಂದರು.
ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ 30ಕ್ಕೂ ಅಧಿಕ ಇನ್ಸ್ಟಾಗ್ರಾಂ ಖಾತೆಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 2023ರ 351(2), 351(3), 352, 75(1), 75(1)(Iಗಿ) ಹಾಗೂ 79ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಆದಷ್ಟು ಶೀಘ್ರದಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
‘ನಟಿ ರಮ್ಯಾ ವಿರುದ್ಧದ ಅವಹೇಳನಕಾರಿ ಪೋಸ್ಟ್ ಗಳ ವಿರುದ್ಧ ಗಂಭೀರವಾದ ಕ್ರಮ ಕೈಗೊಳ್ಳಲಾಗುವುದು. ರಮ್ಯಾ ಅವರಷ್ಟೇ ಅಲ್ಲ, ಯಾವುದೇ ಮಹಿಳೆಯ ವಿಚಾರವಾಗಿ ಈ ರೀತಿಯ ನಡವಳಿಕೆಗಳನ್ನು ಸಹಿಸಲಾಗುವುದಿಲ್ಲ. ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ನಗರ ಪೊಲೀಸ್ ಆಯುಕ್ತರು ಕೆಳಹಂತದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಾನೂ ಕೂಡ ಅಗತ್ಯ ಸಲಹೆ ಸೂಚನೆಗಳನ್ನು ನೀಡುತ್ತೇನೆ’
-ಡಾ.ಜಿ.ಪರಮೇಶ್ವರ್, ಗೃಹಸಚಿವ







