ಹೊಸ ಪಡಿತರ ಚೀಟಿ ವಿತರಿಸಲು ಅಗತ್ಯ ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು : ಹೊಸ ಪಡಿತರ ಚೀಟಿಗಾಗಿ ಈಗಾಗಲೇ ಸಲ್ಲಿಸಿರುವ ಅರ್ಜಿಗಳ ಪರಿಷ್ಕರಣೆ ನಡೆಯುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಹೊಸ ಪಡಿತರ ಚೀಟಿಗಳ ವಿತರಣೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಸೋಮವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಿಸಿದಂತೆ ಬಜೆಟ್‍ನಲ್ಲಿ ಘೋಷಿಸಿರುವ ಅಂಶಗಳನ್ನು ತ್ವರಿತವಾಗಿ ಅನುಷ್ಠಾನ ಮಾಡುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ತಂತ್ರಜ್ಞಾನವನ್ನು ಗರಿಷ್ಠ ಪ್ರಮಾಣದಲ್ಲಿ ಬಳಕೆ ಮಾಡಲಾಗುವುದು. ಇದಕ್ಕಾಗಿ ಒಟ್ಟಾರೆ 5 ಕೋಟಿ ರೂ. ವೆಚ್ಚದಲ್ಲಿ ಸಗಟು ಗೋದಾಮುಗಳಿಗೆ ಸಿಸಿಟಿವಿ ಅಳವಡಿಕೆ, ಜಿಪಿಎಸ್ ಆಧಾರಿತ ವಾಹನಗಳ ಮೇಲೆ ನಿಗಾ ವಹಿಸುವ ವ್ಯವಸ್ಥೆ ಮತ್ತು ಕಮಾಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
‘ಅನ್ನ-ಸುವಿಧಾ’ ಯೋಜನೆ: 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ‘ಅನ್ನ-ಸುವಿಧಾ’ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, 75 ವಯಸ್ಸಿನ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರಿಸುವ ಬಗ್ಗೆ ಚರ್ಚಿಸಲಾಗಿದೆ. ಇದರಿಂದ ಸುಮಾರು 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಮುನಿಯಪ್ಪ ತಿಳಿಸಿದರು.
ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಮರ್ಪಕವಾಗಿ ನಿಗಾವಹಿಸಲು ಸಾಧ್ಯವಾಗುವಂತೆ, ನ್ಯಾಯಬೆಲೆ ಅಂಗಡಿಗಳಲ್ಲಿ ಸ್ಥಾಪಿಸಿರುವ ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಪಾಯಿಂಟ್ ಆಫ್ ಸೇಲ್ ಸಿಸ್ಟಮ್ ಗಳನ್ನು ಸಾರ್ವಜನಿಕ ವಿತರಣಾ ಪದ್ಧತಿಯ ಐಟಿ ವ್ಯವಸ್ಥೆಯೊಂದಿಗೆ ಸಂಯೋಜಿಸಲು ಸೂಕ್ತ ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು.
ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್ ಗೆ 35 ರೂ. ಗಳಿಂದ 45 ರೂ. ಗಳಿಗೆ ಹೆಚ್ಚಳ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. ಹೊಸ ನ್ಯಾಯಬೆಲೆ ಅಂಗಡಿಗಳನ್ನು ಅವಶ್ಯಕತೆಗನುಗುಣವಾಗಿ ಪ್ರಾರಂಭಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರಿಗೆ ಮತ್ತು ಸಹಕಾರ ಸಂಘಗಳಿಗೆ ಹಂಚಿಕೆಯಲ್ಲಿ ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುನಿಯಪ್ಪ ತಿಳಿಸಿದರು.
ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಆಹಾರ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತೆ ವಾಸಿ ರೆಡ್ಡಿ ವಿಜಯಜ್ಯೋತ್ಸ್ನಾ, ನಿಗಮ ನಿರ್ದೇಶಕ ಚಂದ್ರಕಾತ್, ಕಾನೂನು ಮಾಪನ ಇಲಾಖೆ ನಿಯಂತ್ರಕ ಎಂ.ಎಸ್.ಎನ್.ಬಾಬು ಉಪಸ್ಥಿತರಿದ್ದರು.







