ಅರಣ್ಯ ಇಲಾಖೆಯಲ್ಲಿನ 2,000 ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅರಣ್ಯ ಇಲಾಖೆಯಲ್ಲಿನ ವಿವಿಧ ವೃಂದಗಳಲ್ಲಿನ 2,000 ಹುದ್ದೆಗಳನ್ನು 2026-27ನೇ ಆರ್ಥಿಕ ವರ್ಷದಲ್ಲಿ ಭರ್ತಿ ಮಾಡುವ ಮೂಲಕ ಇಲಾಖೆಯನ್ನು ಸಬಲೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ 2026-27ನೆಯ ಸಾಲಿನ ಬಜೆಟ್ ಮಂಡಿಸಿದ ಅವರು, ಉದ್ಯಾನ ನಗರಿ ಬೆಂಗಳೂರಿನ ಹೆಸರಘಟ್ಟ ಹುಲ್ಲುಗಾವಲಿನ ಒಟ್ಟು 5,676 ಎಕರೆ ವಿಸ್ತೀರ್ಣದ ಪ್ರದೇಶವನ್ನು ‘ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸಿದ್ದು, ಈ ಪ್ರದೇಶದ ಆವಾಸಸ್ಥಾನ ಸಂರಕ್ಷಣೆ ಮತ್ತು ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು ಎಂದರು.
ಮಾನವ–ವನ್ಯಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡುವ ಉದ್ದೇಶದಿಂದ ‘ಕರ್ನಾಟಕ ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣಾ ಕಾರ್ಯತಂತ್ರ ಯೋಜನೆ’ಯನ್ನು ಅನುಷ್ಠಾ ನಗೊಳಿಸಲು ಮುಂದಿನ ಐದು ವರ್ಷದಲ್ಲಿ 1,500 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 269 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಾಂಶಗಳು...!
* ಬನ್ನೇರುಘಟ್ಟದಲ್ಲಿ ಐದು ಕೋಟಿ ರೂ.ಗಳ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ.
* ಮೈಸೂರು ಮೃಗಾಲಯ ಹಾಗೂ ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರವಾಸಿಗರ ಅನುಕೂಲತೆಗಾಗಿ ಪಿಪಿಪಿ ಮಾದರಿಯಲ್ಲಿ ಪ್ರಕೃತಿ ನಿರೂಪಣಾ ಕೇಂದ್ರ ಸ್ಥಾಪನೆ.
* ಕಲ್ಯಾಣ ಕರ್ನಾಟಕ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ವಿಶೇಷ ಆದ್ಯತೆ ನೀಡಿ, 75,000 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯೀಕರಣ ಕಾರ್ಯ, ಇದಕ್ಕಾಗಿ 150 ಕೋಟಿ ರೂ. ಅನುದಾನ ಮೀಸಲು.
* ಬೆಂಗಳೂರು ಉತ್ತರ ತಾಲೂಕಿನ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶವನ್ನು ಶ್ವಾಸತಾಣವನ್ನಾಗಿ ಪರಿವರ್ತಿಸಿ, ‘ಸಾಂಸ್ಕೃಕ ನಾಯಕ ಬಸವಣ್ಣ ಜೈವಿಕ ವೈವಿಧ್ಯ ಉದ್ಯಾನ’ ನಿರ್ಮಾಣ.
* 15 ಹೊಸ ನಿರಂತರ ಪರಿವೇಷ್ಠಿಕ ವಾಯು ಗುಣಮಟ್ಟ ಮಾಪನ ಕೇಂದ್ರಗಳ ಸ್ಥಾಪನೆ.
* ಪರಿಸರವಾದಿ ‘ಸಾಲುಮರದ ತಿಮ್ಮಕ್ಕ’ ಅವರ ಸ್ಮರಣಾರ್ಥ ಹುಲಿಕಲ್-ಕುದೂರು ಹತ್ತಿರ ಸ್ಮಾರಕ ನಿರ್ಮಾಣ.







