ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಜಾಮೀನು ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿ ಕುರಿತು ಆಗಸ್ಟ್ 30ರಂದು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಧೀಶ ಐ.ಪಿ. ನಾಯ್ಕ್ ಅವರಿದ್ದ ಪೀಠ ಮಂಗಳವಾರ ಪ್ರಕಟಿಸಿದ್ದು, ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಅರ್ಜಿ ವಿಚಾರಣೆ ವೇಳೆ ಪವಿತ್ರಾ ಗೌಡ ಪರ ವಾದ ಮಂಡಿಸಿದ್ದ ವಕೀಲ ಬಾಲನ್, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಜಾರಿಯಾದ ನಂತರ ಘಟನೆ ನಡೆದಿದೆ. ಆದ್ದರಿಂದ, ಬಿಎನ್‌ಎಸ್‌ಎಸ್ ಅಡಿಯಲ್ಲೇ ದೋಷಾರೋಪ ಪಟ್ಟಿ ಸಲ್ಲಿಸಬೇಕಿತ್ತು. ಆದರೆ, ತನಿಖಾಧಿಕಾರಿಗಳು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಅಡಿಯಲ್ಲಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದರೂ ಬಿಎನ್ಎಸ್ಎಸ್ ಅಡಿಯಲ್ಲಿ ತನಿಖೆ ನಡೆಯಬೇಕು. ಪ್ರಕರಣದಲ್ಲಿ ಆರೋಪಪಟ್ಟಿ ಹಾಗೂ ನ್ಯಾಯಾಲಯದ ಅರಿವು ಎರಡೂ ಕಾನೂನು ಬದ್ದವಾಗಿರದ ಕಾರಣ ಪವಿತ್ರಾ ಗೌಡ ಜಾಮೀನಿಗೆ ಅರ್ಹರಾಗಿದ್ದಾರೆ. ಸುಪ್ರೀಂಕೋರ್ಟ್ ತೀರ್ಪನ್ನು ನಾವು ಪ್ರಶ್ನಿಸುತ್ತಿಲ್ಲ. ತಾಂತ್ರಿಕ ಲೋಪವಿರುವ ಕಾರಣ ಜಾಮೀನು ಮಂಜೂರು ಮಾಡಬೇಕೆಂದು ಮನವಿ ಮಾಡಿದ್ದರು.
ಈ ವಾದವನ್ನು ಆಕ್ಷೇಪಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ಅವರು, 2024ರ ಜುಲೈ 1ರಿಂದ ಬಿಎನ್ಎಸ್‌ಎಸ್ ಜಾರಿಗೆ ಬಂದಿದೆ. ಆದರೆ, ಅದಕ್ಕೂ ಮೊದಲೇ 2024ರ ಜೂನ್ 6ರಂದು ಎಫ್‌ಐಆರ್ ದಾಖಲಾಗಿದೆ. ಆದ್ದರಿಂದ, ಬಿಎನ್‌ಎಸ್‌ಎಸ್ ಸೆಕ್ಷನ್ 531ರ ಪ್ರಕಾರ ಸಿಆರ್‌ಪಿಸಿ ಅನುಸಾರವೇ ತನಿಖೆ ಮುಂದುವರಿಸಿ, ದೋಷಾರೋಪ ಪಟ್ಟಿ ಸಲ್ಲಿಸಬೇಕು. ಪ್ರಕರಣದಲ್ಲಿ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಹಂತದಲ್ಲಿ ಜಾಮೀನು ಅರ್ಜಿ ಸಲ್ಲಿಸಿರುವುದು ತಪ್ಪು ಗ್ರಹಿಕೆಯಿಂದ ಕೂಡಿದೆ. ಆದ್ದರಿಂದ, ಜಾಮೀನು ಅರ್ಜಿ ವಜಾಗೊಳಿಸಬೇಕೆಂದು ಮನವಿ ಮಾಡಿದ್ದರು.







