ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ: ಸಂಘಟಕರೊಂದಿಗೆ ಸಭೆ ನಡೆಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು/ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 2ರಂದು ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಪಥಸಂಚಲನಕ್ಕೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ಸಂಘಟಕರ ಜತೆ ಅಕ್ಟೋಬರ್ 28ರಂದು ಶಾಂತಿ ಸಭೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಆರೆಸ್ಸೆಸ್ ಗೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿಜಯದಶಮಿ ಉತ್ಸವದ ಭಾಗವಾಗಿ ಆಯೋಜಿಸಲಾಗುತ್ತಿರುವ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿರುವ ಮನವಿ ಪರಿಗಣಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಆರೆಸ್ಸೆಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಗೂ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪಥಸಂಚಲಕ್ಕೆ ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿ ಕುರಿತು ನಿರ್ಧಾರ ಕೈಗೊಳ್ಳಲು ಸರ್ಕಾರ ಇದೇ 28ರಂದು ಆಯೋಜಕರೊಂದಿಗೆ ಸಭೆ ನಡೆಸಬೇಕು. ಸಭೆಯ ತೀರ್ಮಾನವನ್ನು ಅಕ್ಟೋಬರ್ 30ರ ಮಧ್ಯಾಹ್ನ 2.30ಕ್ಕೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಸೂಚಿಸಿತು.
ಶಾಂತಿ ಸಭೆಯನ್ನು ಎಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿಯನ್ನು ಶನಿವಾರ ಅರ್ಜಿದಾರರಿಗೆ ತಿಳಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ಆದಷ್ಟು ಬೇಗ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಇದನ್ನು ಹೆಚ್ಚು ಎಳೆಯದಿರುವುದು ಒಳಿತು ಎಂದು ಮೌಖಿಕವಾಗಿ ತಿಳಿಸಿ, ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.







