ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ರದ್ದು ವಿಚಾರ: ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಕೆಗೆ ಸಂಪುಟ ತೀರ್ಮಾನ

ಬೆಂಗಳೂರು : ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ದ ಮೀಸಲಾತಿ ಹೆಚ್ಚಳ ಬಗ್ಗೆ ಇತ್ತೀಚಿಗೆ ಹೈಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧಪಟ್ಟ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಹಾಗೂ ವಿಶೇಷ ಅನುಮತಿ ಅರ್ಜಿ(ಎಸ್ಎಲ್ಪಿ) ಸಲ್ಲಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಈ ವಿಚಾರ ಚರ್ಚೆ ನಡೆಸಲಾಗಿದ್ದು, ಮುಂದಿನ ಕಾನೂನಾತ್ಮಕ ಹಾಗೂ ಆಡಳಿತಾತ್ಮಕ ಕ್ರಮಗಳ ಬಗ್ಗೆ ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಚರ್ಚೆ ನಡೆಸುವ ಜತೆಗೆ ವಿಶೇಷವಾಗಿ 9ನೆ ಅನುಸೂಚಿಗೆ ಸೇರಿಸುವ ಸಾಧ್ಯತೆ ಸೇರಿದಂತೆ ಇತರೆ ಕ್ರಮಗಳನ್ನು ಪರಿಗಣಿಸುವ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಎಸ್ಸಿಗೆ ಶೇ.17ರಷ್ಟು, ಎಸ್ಟಿಗೆ 7ರಷ್ಟು ಮೀಸಲಾತಿ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಆ ಮೂಲಕ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.56ಕ್ಕೆ ಹೆಚ್ಚಳವಾಗಿತ್ತು. ಸರಕಾರದ ಈ ಆದೇಶ ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ದ್ವಿಸದಸ್ಯ ಪೀಠ ಮೊನ್ನೆ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳದ ಆದೇಶವನ್ನು ರದ್ದುಗೊಳಿಸಿ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪು ಸರಕಾರಿ ಹುದ್ದೆಗಳ ನೇಮಕಾತಿ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.
ಅದರಲ್ಲೂ ಈ ಆದೇಶದಿಂದ ರಾಜ್ಯ ಸರಕಾರ ಮತ್ತು ಅದರ ಅಧೀನ ಸಂಸ್ಥೆಗಳ ನೇಮಕಾತಿಗಳ ಮೇಲೆ ಪರಿಣಾಮ ಬೀರಲಿದೆ ಎನ್ನುವ ಮಾತುಗಳು ಕೇಳಿಬಂದಿವೆ.
ಮೈಸೂರಲ್ಲಿ ಚಿತ್ರನಗರಿ: ‘ಮೈಸೂರಿನ ಹಿಮ್ಮಾವು ಪ್ರದೇಶದಲ್ಲಿ ಸುಮಾರು 160 ಎಕರೆ ವಿಸ್ತೀರ್ಣದಲ್ಲಿ ಚಿತ್ರನಗರಿ ನಿರ್ಮಿಸಲು ರಾಜ್ಯ ಸರಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಯೋಜನೆಗೆ 729.43 ಕೋಟಿ ರೂ. ಹಣ ಮೀಸಲಿಡಲು ರಾಜ್ಯ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು:
* ರಾಜ್ಯದ ಯುವ ಜನರಿಗೆ ಶಿಶಿಕ್ಷು ತರಬೇತಿ ಪ್ರಮಾಣ ಹೆಚ್ಚಿಸಲು ಉದ್ದೇಶಿಸಿರುವ ಶಿಶಿಕ್ಷು (ಕರ್ನಾಟಕ ಕಾಯ್ದೆ) ವಿಧೇಯಕ, 2026ಕ್ಕೆ ಒಪ್ಪಿಗೆ.
* ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸುಕ್ಷೇತ್ರ ಶ್ರೀ ಶಾರದಾಂಬೆ ಮಠದ ಹತ್ತಿರ ಹರಿಯುವ ತುಂಗಾ ನದಿಗೆ ಅಡ್ಡಲಾಗಿ ಬ್ಯಾರೇಜ್ ನಿರ್ಮಾಣ ಕಾಮಗಾರಿಯನ್ನು ಅಂದಾಜು 83.40 ಕೋಟಿ ರೂ.ಗಳ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.






