‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ‘ಶಕ್ತಿ ಯೋಜನೆ’ ಸೇರ್ಪಡೆ

ಬೆಂಗಳೂರು, ಸೆ.8 : ಮಹಿಳಾ ಸಬಲೀಕರಣದ ದಿಟ್ಟ ಯೋಜನೆಯಾದ ಸಾರಿಗೆ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ ಯೋಜನೆ’ಯು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.
ಮಂಗಳವಾರ ನಗರದ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ‘ಶಕ್ತಿ ಯೋಜನೆ’ಯು ಪ್ರತಿಷ್ಠಿತ ವಿಶ್ವ ದಾಖಲೆಯಾದ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸೇರ್ಪಡೆಯಾಗಿರುವುದನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ವಿಚಾರವನ್ನು ತಿಳಿಸಿದರಲ್ಲದೆ, ಪ್ರಮಾಣ ಪತ್ರ ಮತ್ತು ಪದಕ (ಮೆಡಲ್)ವನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಸಾರಿಗೆ ಇಲಾಖೆ ಸಚಿವರು ಮತ್ತು ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಕೆಎಸ್ಸಾರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಮತ್ತಿತರರು ಹಾಜರಿದ್ದರು.





