ನ್ಯಾಷನಲ್ ಹೆರಾಲ್ಡ್ ಪ್ರಕರಣ | ರಾಜಕೀಯವಾಗಿ ಸೇಡು ತೀರಿಸಿಕೊಳ್ಳುತ್ತಿರುವ ಬಿಜೆಪಿ : ಸಿದ್ದರಾಮಯ್ಯ

ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಎಫ್‍ಐಆರ್ ದಾಖಲಿಸುವ ಮೂಲಕ ಬಿಜೆಪಿಯವರು ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸದಲ್ಲಿ ನಿರತವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಿರುವುದು ಖಂಡನೀಯ. ಇದು ಬಿಜೆಪಿಯವರು ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸವಾಗಿದೆ ಎಂದು ಹೇಳಿದರು.
ಅಧಿಕಾರ ದುರ್ಬಳಕೆ: ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಇದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ ಒಂದು ಮಿತಿ ಇದೆ. ಈ ಪ್ರಕರಣದಲ್ಲಿ ಕಿರುಕುಳ ನೀಡುವ ಅಗತ್ಯವಿಲ್ಲ. ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರ ಆಸ್ತಿಯಲ್ಲ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದ ಕಾರಣಕ್ಕೆ ಅವರು ಈ ಸಂಸ್ಥೆಯ ಷೇರುಗಳ ಪಾಲಕರಾಗಿದ್ದರು.
ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ. ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ. ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ. ಅದೇ ರೀತಿ ನಮ್ಮ ನಾಯಕರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಕಾರಣ, ಜವಹಾರ್ ಲಾಲ್ ನೆಹರೂ ಅವರ ಕಾಲದಿಂದ ನಡೆದುಕೊಂಡು ಬಂದಿರುವ ಪ್ರತೀತಿಯಂತೆ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಜವಾಬ್ದಾರಿ ಹೊತ್ತಿರುತ್ತಾರೆ ಎಂದು ವಿವರಿಸಿದರು.







