ಸಿದ್ದರಾಮಯ್ಯ ಭಾರತೀಯ ರಾಜಕಾರಣದ ಧೀಮಂತ ನಾಯಕ : ಡಿಸಿಎಂ ಡಿ.ಕೆ.ಶಿವಕುಮಾರ್

Photo credit : X@INCKarnataka
ಬೆಂಗಳೂರು : ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದೇ ಮುಖ್ಯ. ಅದಕ್ಕೆ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇಸಮಾಜಿಕ ಜಾಲತಾಣ ʼಎಕ್ಸ್ʼನಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಹೋರಾಟದ ಮೂಲಕ ರಾಜಕೀಯಕ್ಕೆ ಬಂದ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜನಪರ ಯೋಜನೆಗಳಿಂದ ಹಿಡಿದು ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಹಾಗೂ ಜನಪರ ಆಡಳಿತ ಸಿದ್ದರಾಮಯ್ಯ ಅವರ ವೈಶಿಷ್ಟ್ಯ ಎಂದು ಹೇಳಿದ ಅವರು, 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾದ ದಿನದಿಂದ ಇಂದಿನವರೆಗೆ ಅವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿದ್ದಾರೆ ಎಂದರು.
ಅವರ ಆಡಳಿತದಲ್ಲಿ ಸಚಿವನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ ಮುಂದುವರಿಯಲಿ ಎಂದು ಆಶಿಸಿದರು.
ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ ಎಂದು ಡಿಕೆ ಶಿವಕುಮಾರ್ ಕರೆ ನೀಡಿದರು.






