ದಿಲ್ಲಿಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಿ ʼಬೇಡಿಕೆಗಳ ಪಟ್ಟಿʼ ಸಲ್ಲಿಸಿದ ಸಿದ್ದರಾಮಯ್ಯ; ವರದಿ

Photo credit: X/@siddaramaiah
ಹೊಸದಿಲ್ಲಿ: ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಮರುದಿನವೇ ಸಿದ್ದರಾಮಯ್ಯ ಅವರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ ಎಂದು India Today ವರದಿ ಮಾಡಿದೆ.
ಸಿದ್ದರಾಮಯ್ಯ ಅವರು ಶುಕ್ರವಾರ ದಿಲ್ಲಿಯಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರಕಾರದಲ್ಲಿ ತಮ್ಮ ಪುತ್ರ ಯತೀಂದ್ರ ಅವರಿಗೆ ಪ್ರಮುಖ ಖಾತೆ ಸೇರಿದಂತೆ ಪಕ್ಷದ ಹೈಕಮಾಂಡ್ ಮುಂದೆ ತಮ್ಮ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ರಾಜ್ಯಸಭೆ ಮತ್ತು ಎಂಎಲ್ಸಿ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಮತ್ತು ಸಂಪುಟ ಸ್ಥಾನಗಳಿಗೆ ಸಂಬಂಧಿಸಿದ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಪುತ್ರ ಯತೀಂದ್ರ ಅವರಿಗೆ ವೈದ್ಯಕೀಯ ಶಿಕ್ಷಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥವಾ ಡಿಕೆ ಶಿವಕುಮಾರ್ ಹೊಂದಿದ್ದ ಕೈಗಾರಿಕೆ ಅಥವಾ ಜಲಸಂಪನ್ಮೂಲ ಖಾತೆಯನ್ನು ನೀಡುವಂತೆ ಹೈಕಮಾಂಡ್ ಬಳಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಒಪ್ಪಿಗೆ ಬಳಿಕ ಸಿದ್ದರಾಮಯ್ಯ ಅವರು ಹೈಕಮಾಂಡ್ ನೀಡಿದ ರಾಜ್ಯಸಭಾ ಆಫರ್ ತಿರಸ್ಕರಿಸಿದ್ದಾರೆ. ರಾಜ್ಯ ರಾಜಕೀಯದಲ್ಲೇ ಮುಂದುವರಿಯುವುದಾಗಿ ಹೇಳಿದ್ದು, ತನಗೆ ರಾಷ್ಟ್ರ ರಾಜಕೀಯದಲ್ಲಿ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಇಂದು ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.
— Siddaramaiah (@siddaramaiah) May 29, 2026
ಶಾಸಕರುಗಳಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ|| ಯತೀಂದ್ರ ಸಿದ್ದರಾಮಯ್ಯ ಅವರು ಈ ವೇಳೆ ನನ್ನೊಂದಿಗಿದ್ದರು. pic.twitter.com/3yy5DrAzcO






