ಗಣೇಶೋತ್ಸವ ಆಚರಿಸಲು ಹಿಂದೂಗಳು ಆತಂಕಪಡುವ ಪರಿಸ್ಥಿತಿ ನಿರ್ಮಾಣ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಪ್ರಲ್ಹಾದ್ ಜೋಶಿ | Photo credit : PTI
ನವದೆಹಲಿ: ಕರ್ನಾಟಕದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕದಂತಹ ಸಂಸ್ಕೃತಿಗೆ ಹೆಸರಾದ ರಾಜ್ಯದಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಹಿಂದೂಗಳು ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.
ಟಿ.ನರಸೀಪುರದ ಪೊಲೀಸ್ ಇನ್ಸ್ಪೆಕ್ಟರ್ ಗಣೇಶೋತ್ಸವ ಸಮಿತಿ ಯುವಕರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಜೋಶಿ, ಈ ಕ್ರಮಕ್ಕೆ ಯಾರು ಹೊಣೆ ಎಂಬ ಪ್ರಶ್ನೆ ಎತ್ತಿದ್ದಾರೆ. ಇದು ಗೃಹ ಸಚಿವರ ಸೂಚನೆಯೋ ಅಥವಾ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ತುಷ್ಟೀಕರಣ ರಾಜಕಾರಣದ ಪರಿಣಾಮವೋ ಎಂದು ಪ್ರಶ್ನಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಅಧಿಕಾರಿಯೇ ಒಂದು ಸಮುದಾಯದ ಪರವಾಗಿ ವರ್ತಿಸಿ ಯುವಕರನ್ನು ಬೆದರಿಸಿರುವುದು ಅಕ್ಷಮ್ಯ ಎಂದು ಆರೋಪಿಸಿರುವ ಅವರು, ಸಂಬಂಧಪಟ್ಟ ಇನ್ಸ್ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಹಬ್ಬಗಳ ಆಚರಣೆಯನ್ನು ಕಾನೂನು ಸುವ್ಯವಸ್ಥೆಯ ನೆಪದಲ್ಲಿ ನಿಯಂತ್ರಿಸುವುದು ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಜೋಶಿ ಟೀಕಿಸಿದ್ದಾರೆ.
ಸನಾತನ ಸಂಸ್ಕೃತಿ, ಆಚರಣೆ ಹಾಗೂ ಭಕ್ತಿ-ಭಾವಕ್ಕೆ ಧಕ್ಕೆ ತರುವ ಯಾವುದೇ ಕ್ರಮವನ್ನು ಸಹಿಸಲಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.






