ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ | ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿ ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಎಚ್ಚರಿಕೆ ನೀಡಿದೆ.
ಈ ಕುರಿತು ಪ್ರಕಟನೆ ನೀಡಿರುವ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ.ದಯಾನಂದ, ಸೆ.25ರ ಹೈಕೋರ್ಟ್ ಆದೇಶದಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದ್ದು, ಅದರಂತೆ ಆಯೋಗದಿಂದ ಹೈಕೋರ್ಟ್ಗೆ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು ವಾಟ್ಸಾಪ್ನಲ್ಲಿ ಹಂಚಿಕೆ ಮಾಡಿರುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆದುದರಿಂದ, ಈ ರೀತಿ ಯಾವುದೇ ಸುಳ್ಳು, ತಪ್ಪು ಮಾಹಿತಿಯನ್ನು ಸೃಜಿಸಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸದಂತೆ ಹಾಗೂ ಬಂದಿರುವ ಮಾಹಿತಿಯನ್ನು ಹಂಚಿಕೆ ಮಾಡದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ದಯಾನಂದ ಕೋರಿದ್ದಾರೆ.







