ಸಿಎಂ ಸಿದ್ದರಾಮಯ್ಯಗೆ ʼಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿʼ ಸಲ್ಲಿಕೆ

ಬೆಂಗಳೂರು : ರಾಜೀನಾಮೆ ಕುರಿತ ಚರ್ಚೆ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿದ "ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ"ಯನ್ನು ಅಧಿಕೃತವಾಗಿ ಸ್ವೀಕರ ಮಾಡುವ ಮೂಲಕ ಗಮನ ಸೆಳೆದರು.
ಬುಧವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಸಮಾಜ ಕಲ್ಯಾಣ ಇಲಾಖೆ ಡಾ.ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರಾಘವೇಂದ್ರ ಹಿಟ್ನಾಳ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ದಯಾನಂದ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್, ನಾವು ವರದಿ ಸಲ್ಲಿಸಲು ಸರಕಾರಕ್ಕೆ ಅನುಮತಿ ಕೇಳಿದ್ದೆವು.ಅದರಂತೆ ಇಂದು ಸಮಯ ನಿಗದಿ ಮಾಡಿದೆ. ಇವತ್ತು ರಾಜ್ಯ ರಾಜಕಾರಣದಲ್ಲಿ ಆಕಸ್ಮಿಕವಾಗಿ ದೊಡ್ಡ ಬದಲಾವಣೆಗಳು ಆಗುತ್ತಿವೆ. ಆದರೆ, ನಾವು ವರದಿ ಸಲ್ಲಿಸುತ್ತಿರುವುದಕ್ಕೂ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬದಲಾವಣೆಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.




