ಗುಪ್ತಚರ ವಿಭಾಗದ ಎಡಿಜಿಪಿಯಾಗಿ ಎಸ್.ರವಿ ವರ್ಗಾವಣೆ
ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರಕಾರ ಆದೇಶ

ಎಸ್.ರವಿ PC : allaboutbelgaum.com
ಬೆಂಗಳೂರು : ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ) ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಎಡಿಜಿಪಿ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ದೂರು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ಎಸ್.ರವಿ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ, ಕಮ್ಯುನಿಕೇಷನ್, ಲಾಜಿಸ್ಟಿಕ್ ಅಂಡ್ ಮಾಡ್ರನೈಝೇಷನ್ ವಿಭಾಗದ ಎಡಿಜಿಪಿ ಎಸ್.ಮುರುಗನ್ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಕೆ.ವಿ.ಶರತ್ ಚಂದ್ರ ಅವರನ್ನು ಪೊಲೀಸ್ ದೂರು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.





