ಪ್ರಸಕ್ತ ಸಾಲಿನ SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ; ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು : ಪ್ರಸಕ್ತ ಸಾಲಿನ (2025-2026) ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ನಿರ್ಧಾರ ಪ್ರಶ್ನಿಸಿ ವಿದ್ಯಾರ್ಥಿನಿಯರಾದ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್, ಉಡುಪಿಯ ಅನುಷಾ ಹಾಗೂ ಸುಧಿಕ್ಷಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರಕಾರಕ್ಕೆ ಈ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.
ಇದಕ್ಕೂ ಮುನ್ನ ಅರ್ಜಿದಾರ ವಿದ್ಯಾರ್ಥಿಗಳ ಪರ ವಕೀಲ ಆರ್.ವಿ. ನಾಯ್ಕ್ ವಾದ ಮಂಡಿಸಿ, 2025-2026ನೇ ಸಾಲಿನಿಂದಲೇ ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿ ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು 2026ರ ಮಾರ್ಚ್ 28ರಂದು ಹೇಳಿಕೆ ನೀಡಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಮುಂದುವರಿದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಮುಖ್ಯಸ್ಥರು 2024 ಅಕ್ಟೋಬರ್ 18 ಮತ್ತು 2025ರ ಅಕ್ಟೋಬರ್ 28ರಂದು ಮಾರ್ಗಸೂಚಿ ಹಾಗೂ ಸುತ್ತೋಲೆ ಹೊರಡಿಸಿದ್ದು, ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ 100 ಅಂಕ ನೀಡಬೇಕು. ಅದರಲ್ಲಿ ಲಿಖಿತ ಪರೀಕ್ಷೆಯ ಮೌಲ್ಯಮಾಪನದಲ್ಲಿ 80 ಅಂಕ, ಶಾಲಾ ಆಂತರಿಕ ಪರೀಕ್ಷೆಗೆ 20 ಅಂಕ ನೀಡಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಆದರೆ, ಕೊನೇ ಹಂತದಲ್ಲಿ ಅಂದರೆ ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಸಮಯದಲ್ಲಿ ಸರಕಾರ ಅಂಕಗಳ ಬದಲಿಗೆ ಗ್ರೇಡ್ ನೀಡುವ ತೀರ್ಮಾನ ಕೈಗೊಂಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಸೇರಿದಂತೆ ಕೇಂದ್ರ ಸರಕಾರ ಹಾಗೂ ಕೇಂದ್ರ ಸ್ವಾಮ್ಯ ಸಂಸ್ಥೆಗಳು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಗ್ರೇಡಿಂಗ್ ಅನ್ನು ಪರಿಗಣಿಸುವುದಿಲ್ಲ. ಕೇವಲ ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ. ರಾಜ್ಯ ಸರಕಾರ ಹಿಂದಿ ಹಾಗೂ ಇತರ ತೃತೀಯ ಭಾಷಾ ವಿಷಯಗಳ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಂಡಿಗ್ ನೀಡಿದರೆ, ರಾಜ್ಯದ ವಿದ್ಯಾರ್ಥಿಗಳ/ಉದ್ಯೋಗ ಆಕಾಂಕ್ಷಿಗಳ ಮೇಲೆ ಭವಿಷ್ಯದಲ್ಲಿ ಸಾಕಷ್ಟು ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ, 2025-2026ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಸರಕಾರ ಹಾಗೂ ಕೆಎಸ್ಇಎಬಿಗೆ ನಿರ್ದೇಶಿಸಬೇಕು ಎಂದು ಕೋರಿದರು.
ಆಗ ನ್ಯಾಯಪೀಠ, ತೃತೀಯ ಭಾಷೆ ವಿಷಯಗಳ ಪರೀಕ್ಷೆಯಲ್ಲಿ ಗ್ರೇಡಿಂಗ್ ನೀಡುವ ಬಗ್ಗೆ ರಾಜ್ಯ ಸರಕಾರ ಅಧಿಸೂಚನೆ/ಸುತ್ತೋಲೆ ಹೊರಡಿಸಿದೆಯೇ ಎಂದು ಸರಕಾರಿ ವಕೀಲರನ್ನು ಕೇಳಿತು. ಸರಕಾರದ ಪರ ವಕೀಲರು, ಸದ್ಯ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಸರಕಾರದಿಂದ ಪಡೆದು ತಿಳಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಚಾಲ್ತಿಯಲ್ಲಿರುವ ನಿಯಮಗಳು ಮತ್ತು ಮಾರ್ಗಸೂಚಿಗಳಂತೆ 2025-2026ನೇ ಸಾಲಿನ ಎಸೆಸೆಲ್ಸಿಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.






