ಎಸ್ಸಿ-ಎಸ್ಟಿ ದೌರ್ಜನ್ಯ ಪ್ರಕರಣ: 5 ವರ್ಷಗಳಲ್ಲಿ 10 ಸಾವಿರಕ್ಕೂ ಅಧಿಕ ಕೇಸ್ ದಾಖಲು

ಬೆಂಗಳೂರು, ಜು.13: ‘ರಾಜ್ಯದಲ್ಲಿ ಹಿಂದಿನ ಆರು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಮೇಲೆ 10,883 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 8457 ಆರೋಪ ಪಟ್ಟಿ ಸಲ್ಲಿಸಲಾಗಿದೆ. ಹಾಗೆಯೇ 1,542 ಪ್ರಕರಣಗಳಲ್ಲಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಗುರುವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಡಾ.ಡಿ.ತಿಮ್ಮಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2018-23ರ ತನಕ ವರ್ಷದಿಂದ ವರ್ಷಕ್ಕೆ ಪರಿಶಿಷ್ಟ ಜಾತಿ, ಪಂಗಡದವರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ಚಾರ್ಜ್ ಶೀಟ್‍ಗಳನ್ನು ದಾಖಲು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆಗೆ ಹಾಜರಾಗುವ ಸಂತ್ರಸ್ತರು ಮತ್ತು ಸಾಕ್ಷಿದಾರರಿಗೆ ಪ್ರಯಾಣ ಭತ್ಯೆ, ದಿನಭತ್ಯೆ, ಸಾಕ್ಷಿದಾರರಿಗೆ ಆಹಾರ ಭತ್ಯೆ, ವಿಶೇಷ ವೈದ್ಯಕೀಯ ಔಷಧಿ ಹಾಗೂ ಇನ್ನಿತರ ವೆಚ್ಚದ ದರವನ್ನು ಪರಿಷ್ಕರಿಸಲಾಗಿದೆ. ಸಾಕ್ಷಿದಾರರಿಗೆ ಭತ್ಯೆಗಳನ್ನು ಒದಗಿಸಲು ಸಮಾಜ ಕಲ್ಯಾಣ ಇಲಾಖೆಯ ಎಲ್ಲ ಜಿಲ್ಲೆಗಳ ಜಂಟಿ ಮತ್ತು ಉಪನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.





