ಕಾಲ್ತುಳಿತ ಪ್ರಕರಣ : ತುರ್ತು ಅಧಿವೇಶನ ಕರೆಯಲು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಆರ್.ಅಶೋಕ್
ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದ ಕುರಿತು ಚರ್ಚಿಸಿಲು ವಿಧಾನ ಮಂಡಲ ತುರ್ತು ಅಧಿವೇಶವನ್ನು ಕರೆಯಬೇಕು ಎಂದು ಕೋರಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ರವಿವಾರ ಸಿಎಂಗೆ ಪತ್ರ ಬರೆದಿರುವ ಅಶೋಕ್, ‘ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ.4 ರಂದು ಆರ್ ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯಿಂದ 11 ಜನರ ಸಾವು ದುರಾದೃಷ್ಟಕರ. ಈ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ ಹೇಗೆ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ’ ಎಂದು ಉಲ್ಲೇಖಿಸಿದ್ದಾರೆ.
‘ಈ ಘಟನೆಗೆ ಸಂಬಂಧಿಸಿದಂತೆ ಆಗಿರುವ ಲೋಪಗಳು, ಘಟನೆ ನಂತರ ಸರಕಾರದ ಕ್ರಮಗಳ ಬಗ್ಗೆ ಅನೇಕ ಸಂಶಯಗಳನ್ನು ಹುಟ್ಟು ಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರ ರಕ್ಷಣೆ ಮಾಡಲಾಗುತ್ತಿದೆ. ಸತ್ಯವನ್ನು ಮುಚ್ಚಿಹಾಕಲು ಮೂರು ರೀತಿಯ ತನಿಖೆಗಳನ್ನು ನಡೆಸಲಾಗುತ್ತಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ’ ಎಂದು ಅವರು ತಿಳಿಸಿದ್ದಾರೆ.
‘ಜತೆಗೆ ಭವಿಷ್ಯದಲ್ಲಿ ಇಂತಹ ದುರ್ಘಟನೆಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆಯ ಅಗತ್ಯವಿದೆ. ಕಾಲ್ತುಳಿತ ಘಟನೆಯ ಬಗ್ಗೆ ಸಂಪೂರ್ಣ ತನಿಖೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಸರಕಾರದ ಯೋಜನೆಗಳ ಬಗ್ಗೆ ಚರ್ಚಿಸುವ ಅಗತ್ಯವಿದೆ’ ಎಂದು ಅಶೋಕ್, ಪತ್ರದಲ್ಲಿ ತಿಳಿಸಿದ್ದಾರೆ.







