ಕಾಲ್ತುಳಿತ ಪ್ರಕರಣ | ವರದಿ ಸಲ್ಲಿಕೆಗೆ ಹೈಕೋರ್ಟ್‌ನಲ್ಲಿ ಒಂದು ತಿಂಗಳ ಕಾಲಾವಕಾಶ ಕೋರಿದ ರಾಜ್ಯ ಸರಕಾರ
ಜೂ.12ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡುವಂತೆ ಸರಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಮತ್ತೆ ಒಂದು ತಿಂಗಳ ಕಾಲಾವಕಾಶ ನೀಡುವಂತೆ ಸರಕಾರದ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ.ಜೋಶಿ ನೇತೃತ್ವದ ವಿಭಾಗೀಯ ಪೀಠ ಈ ಕುರಿತ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿತು. ಈ ಕುರಿತು ಇನ್ನೂ ವರದಿಯನ್ನು ಏಕೆ ಸಲ್ಲಿಸಿಲ್ಲ ಎಂದು ವಿಚಾರಣೆಯ ವೇಳೆ ಸರಕಾರದ ಪರ ವಕೀಲರಿಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನಿಸಿದೆ.
ಈ ವೇಳೆ ಪ್ರತಿಕ್ರಿಯಿಸಿದ ಸರಕಾರದ ಪರ ಹಾಜರಾದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರಕಾರ ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ. ಹೀಗಾಗಿ ವರದಿ ಸಲ್ಲಿಸಲು ಒಂದು ತಿಂಗಳ ಅಂದರೆ ಜೂನ್ 16 ರವರೆಗೆ ಕಾಲಾವಕಾಶ ನೀಡುವಂತೆ ಪೀಠಕ್ಕೆ ಮನವಿ ಮಾಡಿದರು.
ಈ ವೇಳೆ ಜೂನ್ 12 ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಈ ಕುರಿತ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದ ಹೈಕೋರ್ಟ್ ಅರ್ಜಿಗಳ ವಿಚಾರಣೆ ಜೂನ್ 12ಕ್ಕೆ ಮುಂದೂಡಿದೆ.