14 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

ಬೆಂಗಳೂರು : ರಾಜ್ಯ ಸರಕಾರವು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 14 ಮಂದಿ ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸ್ಥಳ ನಿರೀಕ್ಷಣೆಯಲ್ಲಿದ್ದ ಡಾ. ಶಿವಕುಮಾರ್ ಎಚ್.ಆರ್. ಅವರನ್ನು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ(ರೇರಾ) ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಹಾಸನ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಶಾಂತಲ ಕೆ.ಟಿ. ಅವರನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರ ಹುದ್ದೆಗೆ ನೇಮಕ ಮಾಡಲಾಗಿದೆ.
ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ.ದುರುಗೇಶ್ ಅವರನ್ನು ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನೇಮಕ ಮಾಡಲಾಗಿದೆ. ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕಿ ಕಾತ್ಯಾಯಿನಿದೇವಿ ಎಸ್. ಅವರನ್ನು ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಅನಿತಾಲಕ್ಷ್ಮೀ ಅವರನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಹುದ್ದೆಗೆ ನೇಮಕ ಮಾಡಲಾಗಿದೆ.
ಬೀದರ್ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅವರನ್ನು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕಿಯಾಗಿದ್ದ ಉಮಾ ಕೆ.ಎ. ಅವರನ್ನು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ವೈಟ್ ಫೀಲ್ಡ್‍ನ ವಿಶೇಷ ಭೂಸ್ವಾಧೀನಾಧಿಕಾರಿ ಶೈಲಜಾ ಪ್ರಿಯದರ್ಶಿನಿ ಎ.ಎಂ. ಅವರನ್ನು ಹೈ ಕೋರ್ಟ್‍ನ ಅಡ್ವಕೇಟ್ ಜನರಲ್‍ರವರ ಕಛೇರಿಯ ಆಡಳಿತಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷಣೆಯಲ್ಲಿದ್ದ ಡಾ. ಪ್ರಜ್ಞಾ ಅಮ್ಮೆಂಬಳ ಅವರನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವಿಶೇಷ ಭೂಸ್ವಾಧೀನಾಧಿಕಾರಿ, ನವೀನ್ ಜೋಸೆಫ್ ಎ. ಅವರನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವ ಹುದ್ದೆಗೆ ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ. ಜಿ.ಸಂತೋಷ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಪ್ರಧಾನ ವ್ಯವಸ್ಥಾಪಕಿ ಗೀತಾ ಹುಡೇದ ಅವರನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಜಂಟಿ ಆಯುಕ್ತೆಯಾಗಿ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಆಯುಕ್ತ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರನ್ನು ಧಾರವಾಡದ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.







