ರಾಜ್ಯ ಸರಕಾರ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ ಬಿಡುಗಡೆ ಮಾಡಲಿ : ವಿಜಯೇಂದ್ರ

ವಿಜಯೇಂದ್ರ
ಶಿವಮೊಗ್ಗ: ರಾಜ್ಯ ಸರ್ಕಾರ ತನ್ನ ಆರ್ಥಿಕ ಪರಿಸ್ಥಿತಿಯ ಕುರಿತು ಕೂಡಲೇ ಶ್ವೇತಪತ್ರ ಹೊರಡಿಸಿ ಜನರಿಗೆ ವಾಸ್ತವ ಸ್ಥಿತಿಯನ್ನು ತಿಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಲಕ್ಷಾಂತರ ಫಲಾನುಭವಿಗಳಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಹೊಸ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳನ್ನು ಯೋಜನೆಗಳಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದ್ದು, ಇದು ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಗಳಿಗೆ ವಿರುದ್ಧವಾಗಿದೆ ಎಂದರು.
ಚುನಾವಣೆಯ ಸಂದರ್ಭದಲ್ಲಿ ಯಾರಿಗೆ ಗ್ಯಾರಂಟಿ ಯೋಜನೆಗಳ ಲಾಭ ನೀಡುವುದಾಗಿ ಭರವಸೆ ನೀಡಲಾಗಿತ್ತೋ, ಅವರಿಗೆಲ್ಲಾ ಯಾವುದೇ ಷರತ್ತುಗಳಿಲ್ಲದೆ ಸೌಲಭ್ಯ ಮುಂದುವರಿಸಬೇಕು. ಕುಂಟುನೆಪ ಹೇಳಿ ಯೋಜನೆಗಳನ್ನು ಕಡಿತಗೊಳಿಸುವ ಬದಲು ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಒತ್ತಡ ಉಂಟಾಗಿದ್ದು, ಸರ್ಕಾರಿ ನೌಕರರ ಸಂಬಳ ಪಾವತಿಗೂ ಸಮಸ್ಯೆ ಎದುರಾಗಿದೆ. ಕರ್ನಾಟಕದಲ್ಲೂ ಅದೇ ಪರಿಸ್ಥಿತಿ ನಿರ್ಮಾಣವಾಗುವ ಆತಂಕವಿದೆ ಎಂದು ಹೇಳಿದರು.
ಸಿಎಂ ಡಿಕೆಶಿಯವರ ತಾಳ್ಮೆಗೆ ನಾನು ಅಭಿನಂದಿಸುತ್ತೇನೆ. ಎಲ್ಲಿ ಸಿದ್ಧರಾಮಯ್ಯನವರು ಕುರ್ಚಿ ಬಿಡುವುದಿಲ್ಲವೋ ಎಂಬ ಪ್ರಶ್ನೆ ಇತ್ತು. ಕೊನೆಗೂ ಡಿ.ಕೆ.ಶಿವಕುಮಾರ್ ಕುರ್ಚಿ ಕಿತ್ತುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ʼಭ್ರಷ್ಟಾಚಾರವನ್ನು ಸಹಿಸುವುದಿಲ್ಲʼ ಎಂಬ ಹೇಳಿಕೆ ಹಾಸ್ಯಾಸ್ಪದವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಆಡಳಿತ ವೈಫಲ್ಯ ಕಂಡಿದೆ ಎಂಬುದು ಜನರ ಅಭಿಪ್ರಾಯವಾಗಿದೆ. ಮುಖ್ಯಮಂತ್ರಿ ಆಗಿರುವ ಅವಧಿಯಲ್ಲಿ ಉತ್ತಮ ಆಡಳಿತ ನೀಡಲಿ ಎಂದು ಹೇಳಿದರು.
ಬಿಡದಿ ಪ್ರದೇಶದಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆ ಕುರಿತು ಮಾತನಾಡಿದ ಅವರು, ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಮಾಡುವುದು ಅಕ್ಷಮ್ಯ. ಕನಿಷ್ಠ ಶೇ.70 ರೈತರು ಒಪ್ಪಿಗೆ ಸೂಚಿಸಬೇಕಾದರೆ, ಇಲ್ಲಿ ಶೇ.90 ರೈತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರೈತರ ವಿರೋಧದ ನಡುವೆಯೂ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಂ. ಚಂದ್ರಪ್ಪ, ಸಂಸದ ಗೋವಿಂದ ಕಾರಜೋಳ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.






