ರಾಜ್ಯದಲ್ಲಿ ಚಲನಚಿತ್ರಗಳಿಗೆ 200 ರೂ. ಏಕರೂಪ ದರ ನಿಗದಿ; ಸರಕಾರದ ಕ್ರಮಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಸಾಂದರ್ಭಿಕ ಚಿತ್ರ | PC : Meta AI
ಬೆಂಗಳೂರು : ಮಲ್ಟಿಪ್ಲೆಕ್ಸ್ಗಳೂ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ. ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸೆಪ್ಟಂಬರ್ 12ರಿಂದ ಅನ್ವಯವಾಗುವಂತೆ ರಾಜ್ಯ ಸರಕಾರ ಜಾರಿಗೆ ತಂದಿರುವ 'ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025' ಅನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್ನ ಷೇರುದಾರ ಸಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್ ಹಾಗೂ ವಿ.ಕೆ. ಫಿಲ್ಮ್ಸ್ ಪ್ರತ್ಯೇಕ ರಿಟ್ ಅರ್ಜಿಗಳನ್ನು ಸಲ್ಲಿಸಿವೆ.
ರಿಟ್ ಅರ್ಜಿಗಳು ಇತ್ಯರ್ಥವಾಗುವವರೆಗೆ ಸರಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂಬ ಅರ್ಜಿದಾರರ ಮಧ್ಯಂತರ ಮನವಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 16ರಂದು ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿದ್ದು, ಅರ್ಜಿದಾರರ ಮಧ್ಯಂತರ ಮನವಿಯನ್ನು ಪುರಸ್ಕರಿಸಿದೆ.





