ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ನ ಸಿಜೆ ಪ್ರಸನ್ನ ವರಾಳೆ ಹೆಸರು ಶಿಫಾರಸು

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ನೇಮಿಸಲು ಕೊಲಿಜಿಯಂ ಶುಕ್ರವಾರ ಶಿಫಾರಸು ಮಾಡಿದೆ.
ಪರಿಶಿಷ್ಟ ಜಾತಿಗೆ ಸೇರಿದ ಹೈಕೋರ್ಟ್‍ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ಪಿ.ಬಿ.ವರಾಳೆ ಅವರು ದೇಶಾದ್ಯಂತ ಹೈಕೋರ್ಟ್‍ಗಳಲ್ಲಿ ಮುಖ್ಯ ನ್ಯಾಯಮೂರ್ತಿ ಹುದ್ದೆ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.
ನ್ಯಾಯಮೂರ್ತಿ ವರಾಳೆ ಅವರು ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಳ್ಳುವ ಮೂಲಕ ವೃತ್ತಿ ಜೀವನ ಆರಂಭಿಸಿದರು. ಆರಂಭಿಕ ವರ್ಷಗಳಲ್ಲಿ ವಕೀಲ ಎಸ್.ಎನ್.ಲೋಯಾ ಅವರ ಅಡಿಯಲ್ಲಿ ಪ್ರಾಕ್ಟೀಸ್ ಮಾಡಿದರು. 1992ರವರೆಗೆ ಔರಂಗಾಬಾದ್‍ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. 2008ರ ಜುಲೈ 18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ವರಾಳೆ ಅವರು ಅ.15, 2022ರಂದು ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು.





