ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್ ಅವರನ್ನು ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ತಕ್ಷಣದಿಂದಲೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಅಂಜುಮ್ ಪರ್ವೇಝ್ ಅವರಿಗೆ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಎಂ. ಅವರಿಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರನ್ನು ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯ ಮೇಲ್ಮನವಿ ಪ್ರಾಧಿಕಾರದ ಸದಸ್ಯ ಕೃಷ್ಣ ಬಾಜಪೈ ಅವರನ್ನು ರಾಜ್ಯ ಮೇಲ್ಮನವಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.




