ತುಮಕೂರು : ಮಾಜಿ ಸಚಿವ ಸಿ. ವೀರಣ್ಣ ನಿಧನ

ಬೆಂಗಳೂರು: ಮಾಜಿ ಸಚಿವ, ಹಿರಿಯ ರಾಜಕಾರಣಿ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಾಗಿದ್ದ ಸಿ. ವೀರಣ್ಣ ಅವರು ಶುಕ್ರವಾರ ರಾತ್ರಿ ತುಮಕೂರು ಜಿಲ್ಲೆಯ ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನರಾದರು. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಕಳೆದ ತಿಂಗಳು ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ವೀರಣ್ಣ ಅವರ ಆರೋಗ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ವಿಚಾರಿಸಿದ್ದರು. ಆದರೆ, ಚಿಕಿತ್ಸೆ ಬಳಿಕವೂ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿದ್ದ ಸಿ. ವೀರಣ್ಣ ಅವರು ರಾಜಕೀಯ ಪ್ರವೇಶಿಸಿದ ಬಳಿಕ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. 1983ರಲ್ಲಿ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ (ಡೆಪ್ಯೂಟಿ ಸ್ಪೀಕರ್) ಕಾರ್ಯನಿರ್ವಹಿಸಿದ್ದ ಅವರು, 1984ರಿಂದ 1989ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ರಾಮಕೃಷ್ಣ ಹೆಗಡೆ ಹಾಗೂ ಎಸ್.ಆರ್. ಬೊಮ್ಮಾಯಿ ನೇತೃತ್ವದ ಸರ್ಕಾರಗಳಲ್ಲಿ ಸಾರಿಗೆ, ಸಣ್ಣ ಉಳಿತಾಯ, ಕೈಗಾರಿಕೆ ಮತ್ತು ವಾಣಿಜ್ಯ, ಬಂಧಿಖಾನೆ ಸೇರಿದಂತೆ 11 ಇಲಾಖೆಗಳ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದರು.
ವಾಲ್ಮೀಕಿ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಪ್ರಕ್ರಿಯೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿಯೆತ್ತಿದ ನಾಯಕರಾಗಿ ಗುರುತಿಸಿಕೊಂಡಿದ್ದರು.
ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಮಾವನಾಗಿದ್ದ ವೀರಣ್ಣ ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಅವರ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.






