ಯುಗಾದಿ, ರಮಝಾನ್ | ಕೆಎಸ್ಸಾರ್ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಯುಗಾದಿ ಹಾಗೂ ರಮಝಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾ.18, ಮಾ.19 ಹಾಗೂ ಮಾ.20ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2000 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.
ರಾಜ್ಯ ಮತ್ತು ಅಂತರ್ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮಾ.22ರಂದು ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲಾಗುತ್ತವೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ. ಹೆಚ್ಚುವರಿ ಸಾರಿಗೆಗಳಿಗೆ ಮುಂಗಡ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟ್ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್ಅಪ್ ಪಾಯಿಂಟ್ನ ಹೆಸರನ್ನು ಗಮನಿಸಬೇಕು.
ಇ-ಟಿಕೇಟ್ನ್ನು www.ksrtc.karnataka.gov.in ವೆಬ್ಸೈಟ್ ಮುಖಾಂತರ ಕಾಯ್ದಿರಿಸಬಹುದು. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ್ ರಾಜ್ಯದಲ್ಲಿ ಇರುವ ಗಣಕೀಕೃತ ಬುಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು. ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳೆ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೆಬ್ಸೈಟ್ನಲ್ಲಿ ಮಾಹಿತಿ ಒದಗಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.






