ಮಲ್ಟಿಪ್ಲೆಕ್ಸ್ಗಳಲ್ಲಿ ಏಕರೂಪ ದರ ನಿಗದಿ: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ

ಸಾಂದರ್ಭಿಕ ಚಿತ್ರ
ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ. ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಸೆಪ್ಟಂಬರ್ 12ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ 'ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025' ರದ್ದು ಕೋರಿ 'ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ'ದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್ನ ಷೇರುದಾರ ಸಂತನು ಪೈ ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿಯು ಮಂಗಳವಾರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ.
ಮನವಿ ಏನು?
ತಿದ್ದುಪಡಿ ನಿಯಮಗಳು ವ್ಯಾಪ್ತಿ ಮೀರಿದ್ದು, ಇದರಿಂದ ಸಂವಿಧಾನ ಖಾತ್ರಿಪಡಿಸುವ ಮೂಲಭೂತ ಮತ್ತು ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಲಿದೆ. ನಿಯಮಗಳು ಜಾರಿಗೆ ಬಂದಲ್ಲಿ ಮಲ್ಟಿಪ್ಲೆಕ್ಸ್ಗಳ ವಹಿವಾಟಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ. ಸರ್ಕಾರಕ್ಕೂ ಭಾರಿ ನಷ್ಟ ಉಂಟಾಗಲಿದೆ. ಆದ್ದರಿಂದ, ತಿದ್ದುಪಡಿ ನಿಯಮಗಳನ್ನು ರದ್ದುಪಡಿಸಬೇಕು ಎಂದು ಕೋರಿರುವ ಅರ್ಜಿದಾರರು, ಅರ್ಜಿ ಇತ್ಯರ್ಥವಾಗುವವರೆಗೆ ತಿದ್ದುಪಡಿ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.







