ಸರಕಾರಿ ಶಾಲಾ ವಿದ್ಯಾರ್ಥಿಗಳ ಸಮವಸ್ತ್ರ ಬದಲಾವಣೆ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯ ವ್ಯಾಪಿ ಸರಕಾರಿ ಶಾಲಾ ಹಾಗೂ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳ ಸಮವಸ್ತ್ರ ಬದಲಾವಣೆಗೆ ಸರಕಾರ ಮುಂದಾಗಿದ್ದು, ಶೀಘ್ರದಲ್ಲಿಯೇ ಗುಣಮಟ್ಟದ ಸಮವಸ್ತ್ರವನ್ನು ಮುಂದಿನ ವರ್ಷದಿಂದ ವಿದ್ಯಾರ್ಥಿಗಳು ಧರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗುರುವಾರ ಸಂಜೆ ವಿಕಾಸಸೌಧದ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ‘ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್’ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳಲ್ಲಿರುವ ಸಮವಸ್ತ್ರ ಮಾದರಿಯಲ್ಲಿಯೇ ಸರಕಾರಿ ಶಾಲಾ ಮಕ್ಕಳಿಗೆ ಹಾಗೂ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಹೊಸ ಸಮವಸ್ತ್ರ ನೀಡಲು ಸರಕಾರ ಮುಂದಾಗಿದೆ. ಆಕರ್ಷಣೆ, ಬಣ್ಣ ಮಾತ್ರವಲ್ಲದೆ, ಉತ್ತಮ ಗುಣಮಟ್ಟದ ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಒಟ್ಟಿನಲ್ಲಿ ಸರಕಾರಿ ಶಾಲಾ ಮಕ್ಕಳು ಸಹ ಚೆನ್ನಾಗಿ ಇರಬೇಕು ಎನ್ನುವುದು ನಮ್ಮ ಸರಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಹೇಳಿದರು.
ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಶಿಕ್ಷಕರಿಗೆ ವೇತನ ಸರಿಯಾಗಿ ತಲುಪುತ್ತಿಲ್ಲ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಾಥಮಿಕ ಶಿಕ್ಷಣ ಕಾರ್ಯಕ್ರಮ ನನ್ನ ಕನಸಿನ ಯೋಜನೆಯಾಗಿದೆ. ಪ್ರಾಥಮಿಕ ಶಿಕ್ಷಣ ಎಲ್ಲಾ ಮಕ್ಕಳ ಶಿಕ್ಷಣಕ್ಕೆ ಅಡಿಪಾಯವಾಗಿದ್ದು, ಈ ವಿಚಾರವಾಗಿ ನಮ್ಮ ಯೋಜನೆಗಳನ್ನು ಮತ್ತೊಂದು ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡುತ್ತೇನೆ ಎಂದು ಅವರು ತಿಳಿಸಿದರು.






