ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ; ಸಚಿವ ನಾಗೇಂದ್ರ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿ ಪತ್ರ ಬರೆದ ಸಿಬಿಐ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಸಚಿವ ನಾಗೇಂದ್ರ ಅವರ ವಿರುದ್ಧ ಕಾನೂನು ಕ್ರಮಕ್ಕೆ(ಪ್ರಾಸಿಕ್ಯೂಷನ್) ಅನುಮತಿ ನೀಡಬೇಕು ಎಂದು ಕೇಂದ್ರೀಯ ತನಿಖಾ ದಳವು(ಸಿಬಿಐ) ರಾಜ್ಯಪಾಲರಿಗೆ ಪತ್ರ ಬರೆದಿರುವುದಾಗಿ ವರದಿಯಾಗಿದೆ.
ನಿಗಮದ ಸುಮಾರು 89.63 ಕೋಟಿ ರೂ.ಗಳನ್ನು ನಕಲಿ ಚೆಕ್‍ಗಳು ಮತ್ತು ಆರ್‍ಟಿಜಿಎಸ್ ಮೂಲಕ ಅಕ್ರಮವಾಗಿ ವರ್ಗಾಯಿಸಿ, ನೂರಾರು ಬೇನಾಮಿ ಖಾತೆಗಳ ಮೂಲಕ ದುರ್ಬಳಕೆ ಮಾಡಲಾಗಿದೆ ಎಂಬುದು ತನಿಖೆಯ ಪ್ರಮುಖ ಆರೋಪವಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ವಿರುದ್ಧ ಈಗಾಗಲೇ ಸಿಬಿಐ ತನಿಖೆ ನಡೆಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪಪಟ್ಟಿಯನ್ನೂ ಸಲ್ಲಿಸಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ಅಗತ್ಯವಿದೆ. ಹೀಗಾಗಿ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಈ ಸಂಬಂಧ ಲೋಕಭವನದಲ್ಲಿ ಕಾನೂನು ತಜ್ಞರ ಸಲಹೆ ಪಡೆಯುತ್ತಿದೆ ಎಂದು ತಿಳಿದುಬಂದಿದೆ. ಹೀಗಾಗಿ ಯಾವ ಸಂದರ್ಭದಲ್ಲೂ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಒಪ್ಪಿಗೆ ನೀಡಬಹುದು ಎಂದು ಮೂಲಗಳು ತಿಳಿಸಿವೆ.




