‘ವಿಬಿ-ಜಿ ರಾಮ್ ಜಿ ಕಾಯ್ದೆ’ ಅಂಗೀಕರಿಸದಿರಲು ಸಂಪುಟ ಸರ್ವಾನುಮತದ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಕೇಂದ್ರ ಸರಕಾರವು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯನ್ನು ರದ್ದುಪಡಿಸಿ, ಹೊಸದಾಗಿ ಜಾರಿಗೆ ತಂದಿರುವ ವಿಜಿ ರಾಮ್ ಜಿ ಕಾಯ್ದೆಯನ್ನು ಅಂಗೀಕರಿಸದಿರಲು ಹಾಗೂ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಂಪುಟ ಸರ್ವಾನುಮತದ ನಿರ್ಧಾರ ಕೈಗೊಂಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಈ ವಿಷಯವನ್ನು ತಿಳಿಸಿದರು.
ಮನರೇಗಾ ಕಾಯ್ದೆಯನ್ನು ರದ್ದುಪಡಿಸಿರುವುದು ಮತ್ತು ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಅನುಷ್ಠಾನಗೊಳಿಸುವುದರಿಂದ ರಾಜ್ಯ ಮತ್ತು ರಾಜ್ಯದ ಜನತೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ, ಸಾಂವಿಧಾನಿಕ ಮತ್ತು ಕಾನೂನು ಪರಿಣಾಮಗಳ ಕುರಿತು, ವಿವಿಧ ನಿಬಂಧನೆಗಳ ಕುರಿತು ಅಡ್ವೊಕೇಟ್ ಜನರಲ್ ಅವರೊಂದಿಗೆ ವಿವರವಾಗಿ ಚರ್ಚಿಸಿ, ಈ ಕಾಯ್ದೆಯನ್ನು ಅಂಗೀಕರಿಸದಿರಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಜನತಾ ನ್ಯಾಯಾಲಯದ ಮೊರೆ:
ಜನರ ನ್ಯಾಯಾಲಯಕ್ಕೂ ‘ವಿಬಿ ಜಿ ರಾಮ್ ಜಿ’ ಕಾಯ್ದೆಯನ್ನು ತೆಗೆದುಕೊಂಡು ಹೋಗಲು ನಿರ್ಣಯಿಸಲಾಗಿದೆ. ಸಂವಿಧಾನದ 73ನೆ ತಿದ್ದುಪಡಿಯಾದ ನಂತರ ದೇಶದಲ್ಲಿ ವಿಕೇಂದ್ರೀಕರಣವಾಗಿದೆ. ಈ ಯೋಜನೆಯಿಂದ ವಿಕೇಂದ್ರೀಕರಣಕ್ಕೆ ಕೊಡಲಿ ಏಟು ಬಿದ್ದಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
ಕೇಂದ್ರ ಸರಕಾರವು ಮನರೇಗಾ ಕಾಯ್ದೆಯನ್ನು ವಾಪಸ್ಸು ಪಡೆಯುವ ಮೂಲಕ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು ಮಾಡಿದೆ. ಮನರೇಗಾ ಮೂಲಕ ಪಂಚಾಯಿತಿಗಳಲ್ಲಿ ಆಸ್ತಿ ನಿರ್ಮಾಣವಾಗುತ್ತಿತ್ತು. ಈಗ ಕರಾಳ ಕಾನೂನು ತಂದು ಕಾರ್ಮಿಕರು ಗುತ್ತಿಗೆದಾರರು ಮಾಡಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲಸ ಮಾಡಬೇಕಿದೆ. ಕೂಲಿಕಾರರ ಹಿತ ಕಾಪಾಡುವ ಆಸಕ್ತಿಯನ್ನು ಕೇಂದ್ರ ಸರಕಾರ ತೋರಿಸಿಲ್ಲ. ಬದಲಿಗೆ ಉದ್ಯೋಗದ ಹಕ್ಕನ್ನು ಕಿತ್ತುಕೊಂಡಿದೆ ಎಂದು ಅವರು ಆರೋಪಿಸಿದರು.
ಗ್ರಾಮಗಳಲ್ಲಿ ಯಾವ ಕೆಲಸವಾಗಬೇಕೆಂದು ತೀರ್ಮಾನಿಸುವ ಅಧಿಕಾರ ಪಂಚಾಯಿತಿಗಳಿಗಿತ್ತು. ಈಗ ಅದನ್ನು ಸಂಪೂರ್ಣವಾಗಿ ಕಿತ್ತುಕೊಂಡು ಕೆಲಸ ಎಲ್ಲಿ ಆಗಬೇಕು ಎಂದು ಕೇಂದ್ರ ಸರಕಾರ ನಿರ್ದೇಶನ ನೀಡುತ್ತದೆ. ಈ ಕರಾಳ ಶಾಸನವನ್ನು ಕರ್ನಾಟಕ ಸರಕಾರ ತೀವ್ರವಾಗಿ ವಿರೋಧಿಸುತ್ತದೆ. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹಾಗೂ ಜನರ ನ್ಯಾಯಾಲಯದಲ್ಲಿ ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದರು.
ಮೇಲ್ನೋಟಕ್ಕೆ 125 ದಿನ ಕೆಲಸ ನೀಡುವುದು ಎಂದಿದ್ದರೂ, ನಿರ್ದಿಷ್ಟವಾಗಿ ಆಗುವಂತಿಲ್ಲ. ಇದಕ್ಕೆ ಹಣ ಎಲ್ಲಿದೆ. ಶೇ.40ರಷ್ಟು ಅನುದಾನವನ್ನು ರಾಜ್ಯ ಸರಕಾರ ಭರಿಸಬೇಕಿದೆ. ಭಾರಿ ಪ್ರಮಾಣದ ಆರ್ಥಿಕ ಹೊರೆ ಬೀಳುವಂತಿದ್ದರೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಚರ್ಚೆ ಮಾಡಬೇಕು. ಆದರೆ ಹಾಗೆ ಆಗಿಲ್ಲ. 15ನೆ ಹಣಕಾಸು ಆಯೋಗದ ಶಿಫಾರಸುಗಳು ಅನುಷ್ಠಾನಕ್ಕೆ ಬಂದ ನಂತರ ಇದನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.







