ರಾಜ್ಯದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್‌ಗೆ ಮುಖಭಂಗ : ವಿಜಯೇಂದ್ರ

ಬೆಂಗಳೂರು : ಬಿಜೆಪಿ ಮತ್ತು ಎನ್‍ಡಿಎ ಮಿತ್ರಕೂಟ 290ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ಸೇತರ ಪಕ್ಷ ಬಿಜೆಪಿ ಸತತವಾಗಿ ಮೂರನೇ ಬಾರಿಗೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವುದು ಪ್ರತಿಯೊಬ್ಬರೂ ಸಂತೋಷದ ವಿಚಾರ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಂಗಳವಾರ ನಗರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲೂ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಿದ್ದು, 17 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಗೆದ್ದಿದೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ ಎಂದರು.
‘ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಚರ್ಚೆಗಳಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಗಿತ್ತು. ಇದೆಲ್ಲವನ್ನೂ ಮೀರಿ ನಮ್ಮ ರಾಜ್ಯದ ಪ್ರಜ್ಞಾವಂತ ಮತದಾರರು ದೇಶದ ಭವಿಷ್ಯ ರೂಪಿಸುವ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ದೃಷ್ಟಿಯಿಂದ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ’ ಎಂದು ಹೇಳಿದರು.





