ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಗಾಗಿ ಬಡಿದಾಟ : ವಿಜಯೇಂದ್ರ

ಬೆಂಗಳೂರು : ‘ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ಏರ್ಪಟ್ಟಿದ್ದು, ಬೀದಿಗಿಳಿದು ಹೊಡೆದಾಟ-ಬಡಿದಾಟ ನಡೆದಿದೆ. ನವೆಂಬರ್ ತಿಂಗಳಿಗೆ ಏನಾಗುತ್ತೋ ಕಾದು ನೋಡೋಣ. ಆದರೆ, ಸಿಎಂ, ಡಿಸಿಎಂ, ಸಚಿವರುಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿವೆ. ಇವುಗಳ ಕಡೆ ರಾಜ್ಯ ಸರಕಾರ ಗಂಭೀರ ಚಿಂತನೆ ಮಾಡುತ್ತಿಲ್ಲ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕಗಳಲ್ಲಿ ಅತಿವೃಷ್ಟಿಯಿಂದ ರೈತರು ಸಂಕಷ್ಟದಲ್ಲಿದ್ದರು. ನಾವೂ ಪ್ರವಾಸ ಮಾಡಿದ್ದೆವು. ಜಿಲ್ಲಾ ಉಸ್ತುವಾರಿಗಳು ನಾಪತ್ತೆಯಾಗಿದ್ದಾರೆ ಎಂದು ಸಿಎಂ ಗಮನಕ್ಕೆ ತಂದಿದ್ದೇವೆ ಎಂದರು.
ಇಲಾಖಾ ಅಧಿಕಾರಿಗಳೂ ತಲೆ ಕೆಡಿಸಿಕೊಳ್ಳುತ್ತಿಲ್ಲ, ತಕ್ಷಣ ಪರಿಹಾರ ಬಿಡುಗಡೆಗೆ ಒತ್ತಾಯಿಸಿದ್ದೇವೆ. ಆದರೆ, ಸಚಿವರು ಬೆಂಗಳೂರಿನಲ್ಲಿ ಕುಳಿತು ಕೇಂದ್ರ ಸರಕಾರ ಪರಿಹಾರ ಕೊಟ್ಟಿಲ್ಲ ಎಂಬ ಹೇಳಿಕೆಗೆ ಸೀಮಿತ ಮಾಡಿದ್ದಾರೆಯೇ ವಿನಃ ಸಂಕಷ್ಟದಲ್ಲಿರುವ ರೈತರಿಗೆ ಕಾಂಗ್ರೆಸ್ ಸರಕಾರ ಪರಿಹಾರ ಕೊಟ್ಟಿಲ್ಲ ಎಂದು ಅವರು ಆಕ್ಷೇಪಿಸಿದರು.
ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಉತ್ತರ ಕನ್ನಡದಲ್ಲೂ ಕಬ್ಬು ಬೆಳೆಗಾರರು ಕೆಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ, ಸಚಿವರು ತಲೆ ಕೆಡಿಸಿಕೊಂಡಿಲ್ಲ ಎಂದು ಟೀಕಿಸಿದರು. ನಾಳೆ ಬೆಳಗಾವಿಗೆ ತೆರಳಿ ಕಬ್ಬು ಬೆಳೆಗಾರರ ಹೋರಾಟದಲ್ಲಿ ಪಾಲ್ಗೊಳ್ಳತ್ತೇನೆ ಎಂದು ಅವರು ಪ್ರಕಟಿಸಿದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸಿಲ್ಲವೆಂದು ಅಲ್ಲಿನ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ವಿಷಯದಲ್ಲೂ ಸರಕಾರ ಗಮನ ಹರಿಸುತ್ತಿಲ್ಲ. ಒಟ್ಟಾರೆಯಾಗಿ ನಾಡಿನ ರೈತರ ಸಮಸ್ಯೆಗಳ ಬಗ್ಗೆ ಚಕಾರವನ್ನೂ ಎತ್ತದ ಈ ಕಾಂಗ್ರೆಸ್ ಸರಕಾರವು ರೈತರ ವಿಚಾರದಲ್ಲಿ ಕಿಂಚಿತ್ತೂ ಕಾಳಜಿ ತೋರಿಸುತ್ತಿಲ್ಲ, ಇದು ಸರಿಯಲ್ಲ ಎಂದು ತಿಳಿಸಿದರು.







