‘ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ’ ಆರೋಪ | ಅಧಿಕಾರಿಗಳನ್ನು ಅಮಾನತು ಮಾಡಲು ವಿಜಯೇಂದ್ರ ಆಗ್ರಹ

ಬಿ.ವೈ. ವಿಜಯೇಂದ್ರ
ಬೆಂಗಳೂರು : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದು, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಬದುಕಿದ್ದರೆ, ಅಧಿಕಾರಿಗಳು ಇದ್ದಾರೆ ಎಂದಾದರೆ ಗೃಹ ಸಚಿವರು ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಬುಧವಾರ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪುಡಾರಿಗಳ ಮಾತನ್ನು ಕಟ್ಟಿಕೊಂಡು ದಲಿತ ಹೆಣ್ಣುಮಗಳು, ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿ ವಿವಸ್ತ್ರಗೊಳಿಸಿದ ಎಲ್ಲ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
140 ಶಾಸಕರಿದ್ದಾರೆ ಎಂದು ಸರಕಾರ ಅಹಂಕಾರದಿಂದ ನಡೆದುಕೊಳ್ಳುತ್ತಿದೆ. ಬಳ್ಳಾರಿ, ಹುಬ್ಬಳ್ಳಿ, ಬೀದರ್ನ ಘಟನೆಗಳನ್ನು ಗಮನಿಸಿದರೆ ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಜನ ಹಿಡಿಶಾಪ ಹಾಕುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಜನರು ಉತ್ತರ ಕೊಡುತ್ತಾರೆಂದ ಅವರು, ಗೃಹ ಸಚಿವರು ಒಂದು ರೀತಿ ಅಸಹಾಯಕರಾಗಿದ್ದಾರೆ. ಅವರಿಗೆ ಇನ್ನೂ ಇದರ ಬಗ್ಗೆ ಅವರಿಗೆ ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಟೀಕಿಸಿದರು.





