ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಅಮಿತ್ ಶಾ ಜತೆ ಚರ್ಚೆ: ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು : ‘ರಾಜ್ಯಾಧ್ಯಕ್ಷ ಸ್ಥಾನ’ದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಮಾಲೋಚನೆ ನಡೆಸಿದ್ದು, ಏನು ಚರ್ಚೆ ಮಾಡಿದ್ದೇನೆಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆಯಷ್ಟೇ ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆಸಿದ್ದೇನೆ. ಪರಿಷತ್ ಚುನಾವಣೆಯ ಫಲಿತಾಂಶ, ಹಿರಿಯೂರು ಕ್ಷೇತ್ರದ ಉಪಚುನಾವಣೆ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದೇನೆ ಎಂದರು.
‘ಟಿಕೆಟ್’ ಪ್ರತಿಷ್ಠೆ ಇಲ್ಲ: ಹಿರಿಯೂರು ಕ್ಷೇತ್ರ ಉಪಚುನಾವಣೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ನಮಗೆ ಯಾವುದೇ ಪ್ರತಿಷ್ಠೆ ಇಲ್ಲ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಅವಕಾಶವಿದೆ. ಯಾವುದೇ ಗೊಂದಲವಿಲ್ಲದೆ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಜೆಡಿಎಸ್ ಟಿಕೆಟ್ ಬೇಡಿಕೆ ಸಹಜ. ಅಂತಿಮವಾಗಿ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಅವರು ವಿವರಣೆ ನೀಡಿದರು.
ಉಪಚುನಾವಣೆಯಲ್ಲಿ ಗೆಲ್ಲುವ ಹಠ ನಮಗಿದೆ. ಟಿಕೆಟ್ ವಿಚಾರದಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಚುನಾವಣೆ ನಮಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಅಮಿತ್ ಶಾಗೆ ರಾಜ್ಯದ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಸೇರಿದಂತೆ ಎಲ್ಲ ಮಾಹಿತಿಯನ್ನು ನೀಡಿದ್ದೇನೆ. ನಾಲ್ಕು ಗೋಡೆಗಳ ನಡುವೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಜಯೇಂದ್ರ ಹೇಳಿದರು.






