ಅಮಿತ್ ಶಾ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ‘ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕು’ ಎಂಬ ಒತ್ತಾಯಗಳ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ರವಿವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿ ಮಾಡಿ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ವಿಧಾನಸಭಾ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, ಎನ್‍ಡಿಎ ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಅಮಿತ್ ಶಾ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ’ ಎಂದು ಬಣ್ಣಿಸಿದ್ದಾರೆ.
‘ದಿಲ್ಲಿಯಲ್ಲಿ ಅಮಿತ್ ಶಾ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು. ಬಿಜೆಪಿ ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದು ವಿಜಯೇಂದ್ರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉಲ್ಲೇಖಿಸಿದ್ದಾರೆ.





