ಜಲಸಂಪನ್ಮೂಲ | ಶೀಘ್ರವೇ ಮೇಕೆದಾಟು ಯೋಜನೆಯ ಡಿಪಿಆರ್ : ಕೇಂದ್ರ ಸರಕಾರಕ್ಕೆ ಪ್ರಸ್ತಾವ

ಬೆಂಗಳೂರು : ಕರ್ನಾಟಕದ ಬಹುನಿರೀಕ್ಷಿತ ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು(ಡಿಪಿಆರ್) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ 2026-27ನೆಯ ಸಾಲಿನ ಬಜೆಟ್ ಮಂಡಿಸಿದ ಅವರು, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಎರಡನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ. ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲೂಕಿನ ವಡೇರಹಳ್ಳಿ ಸಮೀಪ 1.2 ಟಿಎಂಸಿ ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಸರಕಾರದ ವತಿಯಿಂದ 11,343 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಜ್ಜಂಪುರ ತಾಲೂಕಿನ ಅಬ್ಬಿನಹೊಳಲು ಗ್ರಾಮದ ಭೂಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದರಿಂದಾಗಿ 135 ಕಿ.ಮೀ. ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಇದರಡಿ ಬರುವ ಫೀಡರ್ ಕಾಮಗಾರಿಗಳನ್ನು 2027ನೇ ಸಾಲಿನಲ್ಲಿ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಮುಖ್ಯಾಂಶಗಳು...!
* ಆಲಮಟ್ಟಿ ಅಣೆಕಟ್ಟು ಕಾಮಗಾರಿಗೆ ಮುಳುಗಡೆಗೊಳ್ಳುವ ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂ. ಹಾಗೂ ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂ. ನಿಗದಿ, ಜಮೀನು ಸ್ವಾಧೀನಪಡಿಸುವ ಪ್ರಕ್ರಿಯೆ ಪ್ರಾರಂಭ.
* ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ 33 ಗೇಟುಗಳನ್ನು ಬದಲಾಯಿಸಿ ಮುಂಗಾರು ಪೂರ್ವದಲ್ಲಿ ಹೊಸ ಗೇಟುಗಳ ಅಳವಡಿಕೆ ಪೂರ್ಣ.
* ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಶೇಖರಣೆಯಿಂದ ನೀರಿನ ಸಂಗ್ರಹಣಾ ಸಾಮರ್ಥ್ಯದ ಕೊರತೆ ನೀಗಿಸಲು ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಸೇರಿದಂತೆ ಇತರೆ ಪರ್ಯಾಯ ಮಾರ್ಗೋಪಾಯಗಳ ಕುರಿತು ಚಿಂತನೆ.
* ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ ತುಂಗಭದ್ರಾ ಮಂಡಳಿಯ ಸಹಮತಿಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲು ಪ್ರಯತ್ನ.
* ಮಹದಾಯಿ ಕಣಿವೆಯ ಕಳಸಾ-ಬಂಡೂರಾ ನಾಲಾ ಯೋಜನೆಗಳಡಿ ಅರಣ್ಯ ತೀರುವಳಿ ದೊರೆತ ಕೂಡಲೇ ಕಾಮಗಾರಿಗಳು ಪ್ರಾರಂಭ.
* ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು 490 ಕೋಟಿ ರೂ. ಮೊತ್ತದಲ್ಲಿ ಉಡುತೊರೆಹಳ್ಳ ಯೋಜನೆ.
* ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿ.ಎಂ.ಸಿ ಸಾಮರ್ಥ್ಯ ದ ಸಂಗ್ರಹಣಾ ಜಲಾಶಯವನ್ನು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ.
* ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನಾಲ್ಕು ನಿಗಮಗಳಡಿ ಪೂರ್ಣಗೊಳ್ಳುವ ಹಂತದಲ್ಲಿನ 12 ನೀರಾವರಿ ಯೋಜನೆಗಳು, 22 ಕೆರೆ ತುಂಬುವ ಯೋಜನೆಗಳು ಮತ್ತು ಮೂರು ಆಧುನೀಕರಣ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ 1.16 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ.
* ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ 8,045 ಕೋಟಿ ರೂ. ಮೊತ್ತದ 75 ನೀರಾವರಿ ಕಾಮಗಾರಿಗಳ ಅನುಷ್ಠಾ ನ .
* ರಾಜ್ಯದ ಕಾಡಾ ಪ್ರಾಧಿಕಾರದಡಿ ಹತ್ತಿಕುಣಿ ಹಾಗೂ ತುಂಗಭದ್ರಾ ಎಡದಂಡೆ ಶಾಖಾ ಕಾಲುವೆಯಡಿ ಬರುವ 4,745 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ಬಳಕೆಯ ದಕ್ಷತೆ ಹೆಚ್ಚಿಸಲು ಕ್ರಮ.







